ನಾಲ್ಕು ವರ್ಷಗಳ ಹಿಂದೆ ರಾಮಜನ್ಮಭೂಮಿ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಐವರು ನ್ಯಾಯಾಧೀಶರನ್ನು ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ರಾಜ್ಯ ಅತಿಥಿಗಳಾಗಿ ಆಹ್ವಾನಿಸಲಾಗಿದೆ.
ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ , ಮಾಜಿ ಸಿಜೆಐ ಎಸ್‌ಎ ಬೋಬ್ಡೆ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ಅವರ ಐದು ನ್ಯಾಯಾಧೀಶರ ಪೀಠವು 2019 ರಲ್ಲಿ ರಾಮ ಮಂದಿರ ನಿರ್ಮಾಣದ ಪರವಾಗಿ ತೀರ್ಪು ನೀಡಿತ್ತು. ಇವರೆಲ್ಲರನ್ನು ಕಾರ್ಯಕ್ರಮಕ್ಕೆ ಅಥಿತಿಗಳಾಗಿ ಆಹ್ವಾನಿಸಿದ್ದಾರೆ.
ಆಹ್ವಾನಿತರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿಗಳು, ನ್ಯಾಯಾಧೀಶರು ಮತ್ತು ಉನ್ನತ ವಕೀಲರು ಸೇರಿದಂತೆ 50 ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು ಸೇರಿದ್ದಾರೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಮಾಜಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರನ್ನು ಕೂಡ ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.