ಏಪ್ರಿಲ್‌ 4ರಿಂದ ಬೆಂಗಳೂರು ಕರಗ ಆರಂಭ; ವೈಟ್‌ ಟಾಪಿಂಗ್‌ ಪೂರ್ಣಗೊಳಿಸಲು ಸೂಚನೆ

Most read

ಬೆಂಗಳೂರು: ಬೆಂಗಳೂರು ಕರಗ ಏಪ್ರಿಲ್‌ 12ರಂದು ನಡೆಯಲಿದ್ದು, ಕರಗ ನಿರಾತಂಕವಾಗಿ ನಡೆಯಲು ಅಗತ್ಯವಾದ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಕರಗ ಸಮಿತಿಯ ಪದಾಧಿಕಾರಿಗಳು ಸಭೆ ನಡೆಸಿ ಚರ್ಚಿಸಿದರು.

ಕರಗ ನಡೆಯುವ ಕೇಂದ್ರ ಸ್ಥಳವಾದ ಧರ್ಮರಾಯಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್‌ ಮೆನನ್‌ ಸೂಚಿಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರು  ಕರಗ ಶಕ್ತ್ಯೋತ್ಸವ ಸಂಚರಿಸುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳನ್ನು ದುರಸ್ತಿ ಮಾಡಬೇಕು. ಉತ್ಸವ ಸಾಗುವ ರಸ್ತೆಗಳಲ್ಲಿನ ಬೀದಿ ದೀಪಗಳನ್ನು ಸರಿಪಡಿಸಬೇಕು. ಅಗತ್ಯವಿರುವ ಸ್ಥಳಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ವಿದ್ಯುತ್ ಸಂಪರ್ಕ ಕಡಿತಗೊಳ್ಳದಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕರಗ ಮಹೋತ್ಸವ ಏಪ್ರಿಲ್‌ 4ರಿಂದ 14ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಘನತ್ಯಾಜ್ಯ ವಿಭಾಗದಿಂದ ಹೆಚ್ಚುವರಿಯಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯಗಳನ್ನು  ನಿರ್ವಹಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಗೆ ಹರಿಯದಂತೆ ನಿಗಾ ವಹಿಸಬೇಕು ಎಂದು ಅವರು ಸಲಹೆ ನೀಡಿದರು. ಸಂಚಾರ ಪೊಲೀಸ್ ವಿಭಾಗವು ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ದಟ್ಟಣೆಯಾಗದಂತೆ ಮಾರ್ಗ ಬದಲಾವಣೆ ಮಾಡಬೇಕು ಮತ್ತು ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಬೇಕು. ಕರಗ ಮಹೋತ್ಸವ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಬ್ಯಾರಿಕೇಡ್‌ ವ್ಯವಸ್ಥೆ ಮಾಡಬೇಕು ಮತ್ತು ಹಾಗೂ ಅಗ್ನಿಅವಘಡಗಳು ಸಂಭವಿಸದಂತೆ ಅಗ್ನಿ ಶಾಮಕ ವ್ಯವಸ್ಥೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕರಗ ವೀಕ್ಷಿಸಲು ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇವರ ಆರೋಗ್ಯದಲ್ಲಿ ಏರುಪೇರಾದರೆ ಅವರಿಗೆ ಕೂಡಲೆ ಚಿಕಿತ್ಸೆ ನೀಡಲು ಪಾಲಿಕೆ ಆರೋಗ್ಯ ವಿಭಾಗದಿಂದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು. ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ ವ್ಯವಸ್ಥೆಯೂ ಸಿದ್ಧವಾಗಿರಬೇಕು ಎಂದೂ ಚರ್ಚೆ ನಡೆಯಿತು.

ಸಭೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್, ವಲಯ ಆಯುಕ್ತರಾದ ಅರ್ಚನಾ, ದಿಗ್ವಿಜಯ್ ಬೋಡ್ಕೆ, ಉಪ ಆಯುಕ್ತ ಮಂಜುನಾಥ ಸ್ವಾಮಿ, ಬಿಬಿಎಂಪಿ, ಮುಜರಾಯಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

More articles

Latest article