ಬೆಂಗಳೂರು: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವ ಭರವಸೆ ನೀಡಿ ಹಣ ಪಡೆದು ವಂಚಿಸಿದ್ದ ಆರೋಪದಡಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್ ಜೋಶಿ ಮತ್ತು ಎಸ್. ವಿ. ವಿಜಯಲಕ್ಷ್ಮಿ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆಯೂ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರ ಪತ್ನಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಯಲ್ಲಿ ದೂರು ದಾಖಲಿಸಿದ್ದರು. ಇವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ದೇವಾನಂದ್ ಚವ್ಹಾಣ್ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸಹೋದರ ಗೋಪಾಲ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಎಫ್ ಐ ಆರ್ ರದ್ದುಪಡಿಸಬೇಕು ಮತ್ತು ಇವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದರು.
ವಿಚಾರಣೆಯ ಸಂದರ್ಭದಲ್ಲಿ ಜೋಶಿ ಮತ್ತಿತರ ಆರೋಪಿಗಳ ಪರವಾಗಿ ವಾದ ಮಂಡಿಸಿದ ವಕೀಲ ಡಿ.ಎಂ.ರವಿಶಂಕರ್, ಈ ಪ್ರಕರಣ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಪಟ್ಟಿರುತ್ತದೆ. ಘಟನಾವಳಿಗಳು ಮಾರ್ಚ್, ಏಪ್ರಿಲ್, ಮೇ ಮತ್ತು ಆಗಸ್ಟ್ ನಲ್ಲಿ ನಡೆದಿರುತ್ತವೆ. ಅರ್ಜಿದಾರರರು ಹಣ ಹಿಂತಿರುಗಿಸಲು ಒಪ್ಪಿಕೊಂಡಿದ್ದಾರೆ. ಆದರೂ ಪೊಲೀಸರು ಇದೇ 17ರಂದು ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಪ್ರಕರಣ ದುರುದ್ಧೇಶದಿಂದ ಕೂಡಿದ್ದು, ಎಫ್ ಐಆರ್ ರದ್ದುಪಡಿಸಬೇಕು ಮತ್ತು ಅರ್ಜಿದಾರರನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
ಈ ವಾದಕ್ಕೆ ಪ್ರತಿವಾದ ಮಂಡಿಸಿದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ಈ ಕೃತ್ಯಕ್ಕೆ ಕೇಂದ್ರ ಸಚಿವರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ತನಿಖೆ ನಡೆಸುವಾಗ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು.
ಈ ವಾದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು ಘಟನೆ ನಡೆದು ಆರು ತಿಂಗಳ ನಂತರ ದೂರು ಸಲ್ಲಿಸಲಾಗಿದೆ. ಅರ್ಜಿದಾರರು ಹಣ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದಾರೆ. ಇದು ಅರ್ಜಿದಾರರು ಮತ್ತು ಪ್ರತಿವಾದಿ ನಡುವಿನ ವ್ಯವಹಾರದ ವಿಷಯವಾಗಿದೆ. ಆದರೆ ಇದಕ್ಕೆ ದೌರ್ಜನ್ಯ ಕಾಯಿದೆಯ ಬಣ್ಣ ಲೇಪಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.
ದೂರುದಾರರು ಅರ್ಜಿದಾರರ ಮನೆಯಲ್ಲಿ ನಿಂದಿಸಿ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ನಾಲ್ಕು ಗೋಡೆಗಳ ಮಧ್ಯೆ ನಡೆದ ಪ್ರಕರಣ ಇದಾಗಿದೆ. ಸಾರ್ವಜನಿಕ ಸ್ಥಳದಲ್ಲಿ ನಡೆದಿಲ್ಲ. ಆದ್ದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟರು.