ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೊಂಡ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಗವತ್ ಈ ರೀತಿಯ ಹೇಳಿಕೆಗಳನ್ನು ನೀಡುವುದನ್ನು ಮುಂದುವರಿಸಿದರೆ ದೇಶದಲ್ಲಿ ತಿರುಗಾಡುವುದೂ ಕಷ್ಟವಾಗಬಹುದು ಎಂದು ಖರ್ಗೆ ಕಿಡಿಕಾರಿದ್ದಾರೆ.
ರಾಮಮಂದಿರ ಪ್ರತಿಷ್ಠಾಪನೆಗೊಂಡ ದಿನವೇ ಭಾರತಕ್ಕೆ ಸ್ವಾತಂತ್ರ್ಯ ದೊರೆಕಿತ್ತು ಎನ್ನುವುದಾದರೆ 1947ರ ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟದ ಇತಿಹಾಸ ಇವರಿಗೆ ನೆನಪಿಲ್ಲವೇ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. 1947ರ ಸ್ವಾತಂತ್ರ್ಯಕ್ಕಾಗಿ ನೂರಾರು ವರ್ಷಗಳ ಕಾಲ ನಡೆದ ಹೋರಾಟ, ಹೋರಾಟಗಾರರ ಪ್ರಾಣ ತ್ಯಾಗ ಯಾವುದು ನೆನಪಿಲ್ಲವೇ? ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಭಾಗಿಯಾಗದೇ ಇರುವವರು ಮಾತ್ರ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು ಎಂಬ ವಿಚಾರವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಭಾಗವತ್ ಇಂತಹ ಹೇಳಿಕೆಗಳನ್ನು ನೀಡುವುದನ್ನು ಮುಂದುರಿಸಿದರೆ ಈ ದೇಶದಲ್ಲಿ ಅವರು ತಿರುಗುವುದೂ ಕಷ್ಟವಾಗುತ್ತದೆ. ಇತಿಹಾಸ ಮರೆತವರು ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.