ಇಂದಿನಿಂದ ಚಿತ್ರಮಂದಿರಗಳಲ್ಲಿ ‘ಕೋಟಿ’

Most read

ಬಹುನಿರೀಕ್ಷೀತ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.‌ ಚೆನ್ನೈ ಮತ್ತು ಹೈದರಾಬಾದಿನಲ್ಲೂ ಹಲವು ಶೋಗಳಿವೆ. ನಿನ್ನೆ ಮತ್ತು ಮೊನ್ನೆ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಹೌಸ್‌ಫುಲ್ ಪೇಯ್ಡ್ ಪ್ರೀಮಿಯರ್ ಶೋಗಳು ನಡೆದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸಿನಿಮಾದಲ್ಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ.
ಈ ಕಥಾಹಂದರದ ‘ಕೋಟಿ’ ಇಡೀ‌ ಪ್ಯಾಮಿಲಿಯೇ ಕೂತು ನೋಡುವಂತ ಸಿನಿಮಾ.

ಬುಧವಾರ ಬೆಂಗಳೂರಿನಲ್ಲಿ ನಡೆದ ಸೆಲೆಬ್ರಿಟಿ ಪ್ರೀಮಿಯರ್ ಶೋನಲ್ಲಿ ಆರುನೂರಕ್ಕೂ ಅಧಿಕ ಟೀವಿ ಮತ್ತು ಸಿನಿಮಾ ತಾರೆಗಳು ಸಿನಿಮಾ ವೀಕ್ಷಿಸಿದರು‌. ಸಿನಿಮಾದಲ್ಲಿನ ಧನಂಜಯ್ ಅವರ ಕಾಮನ್ ಮ್ಯಾನ್ ‘ಕೋಟಿ’ ಪಾತ್ರದ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಥಿಯೇಟರಿನ ಹೊರಗೂ ಸಿನಿಮಾ ಕ್ಲೈಮ್ಯಾಕ್ಸ್ ನೆರೆದಿದ್ದ ಜನರ ಮಾತಿನ ವಿಷಯವಾಗಿತ್ತು. ಈ ಸಿನಿಮಾದಲ್ಲಿ ವಿಶೇಷವಾಗಿ ಬರುವ ಒಂದು ಸ್ಟಾರ್ ಕ್ಯಾಮಿಯೋಗೆ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ಇಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳುತ್ತಿರುವ ‘ಕೋಟಿ’ ಮುಂದಿನ ವಾರಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.

ರಿಲೀಸ್‌ಗೂ ಮುನ್ನವೇ ಸಾಕಷ್ಟು ಸದ್ದು‌ ಮಾಡಿರುವ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಗೆಲ್ಲುವ ಭರವಸೆಯಾಗಿ ಕಂಡಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಇಂದಿನಿಂದ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.

More articles

Latest article