ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು, ಗೋಪಾಲ್ ಜೋಶಿಯವರು ಪ್ರಲ್ಹಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಹುಬ್ಬಳ್ಳಿ ಭಾಗದ ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಗೋಪಾಲ್ ಜೋಶಿಯವರ ಮೇಲೆ ಬಂದಿರುವ ಆರೋಪಕ್ಕೂ ನನಗೂ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನುಣಿಚಿಕೊಳ್ಳುವುದು ಸರಿಯಲ್ಲ. ಹಾಗಾಗಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.
ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇನಾನಂದ ಚೌಹಾಣ್ ಅವರು ದಾಖಲೆ ಕೊಟ್ಟಿದ್ದಾರೆ. ಅಮಿತ್ ಶಾ ಅವರ ಹೆಸರನ್ನ ಬಳಸಿಕೊಳ್ಳಾಗಿದೆ. ಪ್ರಲ್ಹಾದ್ ಜೋಶಿಯವರ ಪ್ರಭಾವ ಬಳಿಸಿಕೊಂಡು ವಂಚಿಸಲಾಗಿದೆ.
ಇಡಿ, ಐಟಿಯವರನ್ನ ಚೂ ಬಿಟ್ಟು ಹೆದರಿಸಿ ದೇವಾನಂದ ಚೌಹಾಣ್ ಅವರನ್ನ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಗೋಪಾಲ್ ಜೋಶಿಯವರು ಆರ್.ಎಸ್.ಎಸ್ ನಲ್ಲಿ ತೊಡಗಿಸಿಕೊಂಡವರು. ಆರ್.ಎಸ್.ಎಸ್ ನ ಕೆಲ ನಾಯಕರು ಈ ರೀತಿಯ ಟಿಕೆಟ್ ದಂಧೆಯಲ್ಲಿ ತೊಡಗಿರುವ ಬಗ್ಗೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.