ವರಿಷ್ಠರು ಚುನಾವಣೆಗೆ ಸ್ಪರ್ಧಿಸು ಎಂದರೆ ಧಾರವಾಡ ಸೇರಿ ರಾಜ್ಯದ ಯಾವ ಕ್ಷೇತ್ರದಲ್ಲಾದರು ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಜಗದೀಶ್ ಶೆಟ್ಟರ್ ಎಂಪಿ ಚುನಾವಣೆಗೆ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸ್ಪರ್ಧೆ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ. ಪಕ್ಷದ ನಾಯಕರ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಜೊತೆ ನಡೆದ ಸಭೆಯಲ್ಲಿ ಚರ್ಚೆಯಾಗಿದೆ. ಅದರ ಜೊತೆ ಪಕ್ಷದ ಸಂಘಟನೆ ಕುರಿತಂತೆ ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿದ ಜಗದೀಶ್ ಶೆಟ್ಟರ್, ಡಿಕೆ ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಹೇಳಿಕೆ ವಿಚಾರ ಸರಿಯಲ್ಲ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನು ದಾಟಬಾರದು ಎಂದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್, ಧಾರವಾಡ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಎಂದು ಹೇಳಿರುವುದು, ಸದ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂಸದರಾಗಿರುವ ಧಾರವಾಡ ಕ್ಷೇತ್ರದ ಮೇಲೆ ಶೆಟ್ಟರ್ ಕಣ್ಣಿಟ್ಟಿರುವುದು ಸ್ಪಷ್ಟವಾಗಿದೆ.