ಮದ್ದೂರು: ಪ್ರತಿಭಟನೆಗೆ ಕಾರ್ಯಕರ್ತರನ್ನು ಕರೆಸಿದ ಮೇಲೆ ಅವರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಂಘಟನೆಗಳ ಜವಾಬ್ದಾರಿ ಎಂದು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಅವರು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ಸಭೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಇಂದ್ರೇಶ್, ಮನ್‌ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಮ್ ಅವರು ಹಾಜರಿದ್ದರು. ಮದ್ದೂರಿನಲ್ಲಿ ಬಿಜೆಪಿ ಮುಖಂಡರು ಮತ್ತು ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು.
ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆಗೆ ನಾಂದಿ ಹಾಡಿದವರಿಗೆ ಶಿಕ್ಷೆ ಖಚಿತ. ಅವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಈ ಕೃತ್ಯದ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲಾಗುತ್ತದೆ. ಒಂದು ವೇಳೆ ಈ ಕೃತ್ಯ ಪೂರ್ವ ನಿಯೋಜಿತವಾಗಿದ್ದು, ಸಂಚು ರೂಪಿಸಿದವರಿಗೂ ಶಿಕ್ಷೆಯಾಗಲಿದೆ ಎಂದರು.
ಇಂದು ನಡೆಯಲಿರುವ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ, ಮೆರವಣಿಗೆ ಕುರಿತೂ ಚರ್ಚಿಸಿ ಸಲಹೆಗಳನ್ನು ನೀಡಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಸಂಘ ಪರಿವಾರದ ಮುಖಂಡರಾದ ಉಲ್ಲಾಸ್, ಅವಿನಾಶ್ ಭಾಗವಹಿಸಿದ್ದರು.