ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟ ಮಹಾಯುತಿ ಮತ್ತೆ ಅಧಿಕಾರ ಹಿಡಿಯುವ ಸಾಧ್ಯತೆಗಳಿವೆ. ಏಳರಲ್ಲಿ ನಾಲ್ಕು ಸಮೀಕ್ಷೆಗಳು ಮಹಾಯುತಿ ಪರವಾಗಿವೆ.
ಮತ್ತೊಂದು ಕಡೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ) ತೀವ್ರ ಪೈಪೋಟಿ ನೀಡಿದ್ದು ಅಧಿಕಾರಕ್ಕೆ ಬರುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು. ಬಿಜೆಪಿ 149 ಸ್ಥಾನಗಳಲ್ಲಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 59 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಪ್ರತಿಪಕ್ಷ ಬಣ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಶರದ್ ಪವಾರ್) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.