ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದ ವಿಚಾರಣೆಗಾಗಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದರು. ಈ ಮಧ್ಯೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ಬೆಳ್ತಂಗಡಿಯಲ್ಲೇ ಬೀಡು ಬಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂಬ ಆರೋಪದ ಮೇಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ತಿಮರೋಡಿ ನಿವಾಸಿ ಮಹೇಶ್ ಶೆಟ್ಟಿ ಅವರನ್ನು ಬಂಧಿಸಲು ಆಗಸ್ಟ್ 21ರಂದು ಆಗಮಿಸಿದ್ದರು. ಆ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ಮಹೇಶ ಶೆಟ್ಟಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಹೇಶ್ ಶೆಟ್ಟಿ ಈ ಪ್ರಕರಣದ ಮೂರನೇ ಆರೋಪಿಯಾಗಿದ್ದಾರೆ.
ಇಂದು ಬೆಳಗ್ಗೆ ಮಹೇಶ್ ಶೆಟ್ಟಿ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದರು. ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಬೀಡುಬಿಟ್ಟ ಪ್ರಣವ್ ಮೊಹಾಂತಿ:
ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಬೆಳ್ತಂಗಡಿಗೆ ಆಗಮಿಸಿದ್ದಾರೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ರಜೆಯ ಮೇಲೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಹಾಂತಿ ಅವರೇ ವಿಚಾರಣೆ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಲಿದ್ದಾರೆ.