ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಸಿದ್ದತೆಗಳನ್ನು ಪರಿಶೀಲಿಸಿದರು.
ಜನವರಿ 26 ರಂದು ಬೆಳಗ್ಗೆ 9ಗಂಟೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ನಂತರ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವ ಸಂದೇಶವನ್ನು ನೀಡಲಿದ್ದಾರೆ.
ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳು ಪಥಸಂಚಲನ ನಡೆಸಿಕೊಡಲಿದ್ದಾರೆ1500 ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಲಿದ್ದಾರೆ. ಪೊಲೀಸ್ ಮಿಲಿಟರಿ ಪಡೆಗಳು ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯ-3 ಅಗರದ ಕರ್ನಾಟಕ ಪಬ್ಲಿಕ್ ಶಾಲೆಯ 800 ಮಕ್ಕಳು ‘ನಾವೆಲ್ಲರೂ ಒಂದೇ ನಾವು ಭಾರತೀಯರು’ ಹಾಗೂ ಹೇರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 650 ಮಕ್ಕಳು ‘ಅರಿವೇ ಅಂಬೇಡ್ಕರ್’ ಕುರಿತು ನೃತ್ಯ ಪ್ರದರ್ಶಿಸಲಿದ್ದಾರೆ. ಗೂರ್ಖಾ ರೈಫಲ್ಸ್ ತಂಡದಿಂದ ಖುಕ್ರಿ ನೃತ್ಯ ಹಾಗೂ ಪಂಜಾಬ್‌ನ ಸೈನಿಕರಿಂದ ಭಾಂಗ್ರಾ ಪಂಜಾಬಿ ಜಾನಪದ ನೃತ್ಯ ಮತ್ತು ಗ್ಯಾಟ್ಕಾ ಟೀಮ್, ಮೈಸೂರಿನ ಕೆ.ಐ.ಆರ್.ಪಿ ಮೌಂಟೆಡ್ ಪೊಲೀಸ್ ತಂಡದಿಂದ ಟೆಂಟ್ ಪೆಗ್ಗಿಂಗ್ ಹಾಗೂ ಆಂತರಿಕ ಭದ್ರತಾ ವಿಭಾಗ ಬಸ್ ಹಸ್ತಕ್ಷೇಪ ಪ್ರದರ್ಶನ ನೀಡಲಿದ್ದಾರೆ.
ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ ಹಾಗೂ ಇತರ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಆಂಬುಲೆನ್ಸ್, ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಭದ್ರತೆಗಾಗಿ 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಂದೋಬಸ್ತ್ ಗೆ 10 ಕೆಎಸ್ಆರ್ ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡವೂ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಮಾಣೆಕ್ ಷಾ ಮೈದಾನ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆ.ಎಸ್.ಆರ್.ಪಿ/ಸಿ.ಎ.ಆರ್ ತುಕಡಿಗಳು, 2 ಅಗ್ನಿ ಶಾಮಕ ವಾಹನಗಳು, 2 ಅಂಬುಲೆನ್ಸ್, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಆರ್.ಐ.ಪಿ ಪಡೆಯನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿದೆ. ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 103 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ವಿಐಪಿ ಪಾಸ್ ಹೊಂದಿರುವವರು ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು.
ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್ ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರೂ ಪಾಸ್ ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರುವಂತಿಲ್ಲ.