ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ಮಾರ್ಚ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳನ್ನು ಕುರಿತು ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ತಿಗೆ ತಿಳಿಸಿದರು.
ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಏಕಾಏಕಿ ಬಂದ್ ಕರೆಯುವ ಅಗತ್ಯವಿರಲಿಲ್ಲ. ಈ ನಿರ್ಧಾರ ಸರಿಯಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡದ ನಾರಾಯಣಸ್ವಾಮಿ ಅವರು, ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಮಾ.22ರಂದು ಬಂದ್ ಕರೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ಗೊಂದಲದ ಪರಿಸ್ಥಿತಿಯನ್ನು ನಿವಾರಣೆ ಮಾಡಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದನ್ನು ತಿಳಿಸಬೇಕೆಂದು ಆಗ್ರಹಿಸಿದರು.