ಕೊಪ್ಪಳ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರು ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕೊಪ್ಪಳ ಗಡಿಯಾರ ಕಂಬದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ವಕ್ಫ್ ಆಸ್ತಿ ಉಳಿಸಿಕೊಳ್ಳಲು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದೇವೆ. ವಕ್ಫ್ ಕಾಯ್ದೆ ಲೋಪದೋಷಗಳಿಂದ ಕೂಡಿದೆ. ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿಗೂ ಅವಕಾಶ ಕೊಡುವುದಕ್ಕೆ ನಾವು ಒಪ್ಪುವುದಿಲ್ಲ. ಇದು ಸಂವಿಧಾನದ ವಿರೋಧಿ ನಡೆಯಾಗಿದೆ ಎಂದು ಸಮಾಜದ ಮುಖಂಡರು ಆಕ್ರೋಶ ಹೊರಹಾಕಿದರು.
ಮುಸಲ್ಮಾನರ ಆಸ್ತಿ ಲೂಟಿಗೆ ಬಿಜೆಪಿ ಸಂಚು ಹೂಡಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಮುಸಲ್ಮಾನ ಮುಖಂಡರು ಘೋಷಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು..