2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕೇಂದ್ರ ಸಚಿವರೊಂದಿಗೆ ಎಂಬಿ ಪಾಟೀಲ್‌ ಚರ್ಚೆ

Most read

ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮಗೊಳಿಸುವ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಮತ್ತು ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಯೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. 

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ಸ್ಥಾನಮಾನ ದರ್ಜೆಗೇರಿಸಬೇಕು. ಇದು ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಕಲ್ಪಿಸಬಹುದು. ಎರಡೂ ವಿಮಾನ ನಿಲ್ದಾಣಗಳಲ್ಲಿ ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸಬಲ್ಲ ಹೊಸ ಟರ್ಮಿನಲ್‌ ನಿರ್ಮಿಸಲಾಗುತ್ತಿದೆ. ಎ 321 ದರ್ಜೆಯ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗುವಂತೆ 12 ಪಾರ್ಕಿಂಗ್‌ ಬೇ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್‌ ಆಗುವಂತೆ ಕ್ರಮ ವಹಿಸಲಾಗಿದೆ ಎಂದು ಸಚಿವರು ಎಕ್ಸ್‌ ಮೂಲಕ ಮಾಹಿತಿ ನೀಡಿದ್ದಾರೆ.

 ಮೈಸೂರು, ಶಿವಮೊಗ್ಗ, ಹಾಸನ, ಕಾರವಾರ ಮತ್ತು ರಾಯಚೂರುಗಳಲ್ಲಿ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಮತ್ತು ಮೇಲ್ದರ್ಜೆಗೇರಿಸಲು ನೆರವು ನೀಡುವಂತೆ ಕೋರಲಾಗಿದೆ. ಇವುಗಳ ಅಭಿವೃದ್ಧಿಯಿಂದ ಇ-ಕಾಮರ್ಸ್ ಮತ್ತು ಲಾಜಿಸ್ಟಿಕ್ಸ್ ವಹಿವಾಟು ಹೆಚ್ಚಲಿದೆ ಮತ್ತು ಬೆಂಗಳೂರಿನಾಚೆಯೂ ಆರ್ಥಿಕ ಬೆಳವಣಿಗೆ ವೃದ್ಧಿಯಾಗಲಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

More articles

Latest article