ಬೆಂಗಳೂರು: ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುರಿಯುತ್ತಿರುವ ಮಳೆಯ ನಡುವೆಯೇ ಕಾಮಾಕ್ಷಿಪಾಳ್ಯ ಪೊಲೀಸರು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಬಳಿಯಿಂದ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ. ದರ್ಶನ್ ಮತ್ತು ಪವಿತ್ರಗೌಡ ಪೊಲೀಸರ ಬೊಲೆರೋ ವಾಹನದಲ್ಲಿ ಕೂರಿಸಿಕೊಂಡಿದ್ದು, ಉಳಿದ ಆರೋಪಿಗಳನ್ನು ಕೆ.ಎಸ್ಆರ್ ಪಿ ಬಸ್ ನಲ್ಲಿ ಕರೆದೊಯ್ಯಲಾಗುತ್ತಿದೆ.
ವೈದ್ಯಕೀಯ ಪರೀಕ್ಷೆಯ ನಂತರ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಎಲ್ಲ ಆರೋಪಿಗಳ ಪೊಲೀಸ್ ಕಸ್ಟಡಿಗಾಗಿ ಸರ್ಕಾರಿ ಅಭಿಯೋಜಕರು ವಿನಂತಿಸಲಿದ್ದಾರೆ. ನ್ಯಾಯಾಲಯ ಪೋಲೀಸ್ ಕಸ್ಟಡಿ ನೀಡಿದರೆ, ದರ್ಶನ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಬೇಕಾಗುತ್ತದೆ.
ಕಳೆದ ಭಾನುವಾರ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕನನ್ನು ಬೆಂಗಳೂರಿಗೆ ಕರೆಯಿಸಿಕೊಂಡು, ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯ ಪಟ್ಟಣಗೆರೆಯ ಶೆಡ್ ಒಂದರಲ್ಲಿ ಕೂಡಿಟ್ಟುಕೊಂಡು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ನಂತರ ಆತನ ಮೃತದೇಹವನ್ನು ಸುಮನಹಳ್ಳಿ ಸಮೀಪದ ರಾಜಾಕಾಲುವೆ ಬಳಿ ಎಸೆದು ಹೋಗಲಾಗಿತ್ತು. ಮೃತದೇಹ ಪತ್ತೆಯಾಗುತ್ತಿದ್ದಂತೆ ತನಿಖೆ ಆರಂಭಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ಮೃತನ ಗುರುತು ಪತ್ತೆ ಮಾಡಿದ್ದಲ್ಲದೆ ಕೊಲೆಯ ಸಂಚನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಇಂದು ಬೆಳಿಗ್ಗೆ ಮೈಸೂರಿನ RADISON BLUE ಹೊಟೇಲ್ ನಲ್ಲಿ ಜಿಮ್ ಮಾಡುತ್ತಿದ್ದ ನಟ ದರ್ಶನ್ ಇನ್ನೇನು ತಮ್ಮ ಸಿನಿಮಾದ ಶೂಟಿಂಗ್ ಗೆ ಹೋಗಬೇಕಿತ್ತು. ಈ ಸಂದರ್ಭದಲ್ಲಿ ಆಗಮಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದರು. ಈ ನಡುವೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸುಮಾರು ಹತ್ತು ಮಂದಿ ಆರೋಪಿಗಳನ್ನೂ ಹಲವೆಡೆ ಬಂಧಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿತ್ತು. ಮತ್ತೊಂದೆಡೆ ಪ್ರಕರಣದ ಕೇಂದ್ರಬಿಂದುವಾಗಿರುವ ದರ್ಶನ್ ಗೆಳತಿ ಮತ್ತು ಚಿತ್ರನಟಿ ಪವಿತ್ರಾ ಗೌಡ ಅವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದರು.