ಬೆಂಗಳೂರು: ಕರ್ನಾಟಕ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ನಿಮ್ಹಾನ್ಸ್) ಯ “ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಟೆಲಿ ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ. ನಿಮ್ಹಾನ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ಗಳಲ್ಲಿ ಈ ಘಟಕಗಳ ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯ ಆರೋಗ್ಯ ಸೇವೆಯನ್ನು ಕಲ್ಪಿಸುತ್ತಿದೆ. ರಾಜ್ಯ ಸರ್ಕಾರ ನೀತಿ ಆಯೋಗ, ನಿಮ್ಹಾನ್ಸ್ ಸಹಯೋಗದಲ್ಲಿ ಆರಂಭಿಸಿರುವ ಕರ್ನಾಟಕ ಬ್ರೈನ್ ಹೆಲ್ತ್ ಇನೀಷಿಯೇಟಿವ್, ನರರೋಗ ಆರೈಕೆಯಲ್ಲಿ ತಜ್ಞರ ಸೇವೆಯನ್ನು ಜಿಲ್ಲಾಮಟ್ಟದಲ್ಲಿಯೂ ಲಭ್ಯವಾಗಿಸಿದೆ. ತೀವ್ರತರ ಪಾರ್ಶ್ವವಾಯು ಮತ್ತು ನರರೋಗ ಆಘಾತ ಆರೈಕೆಯಲ್ಲಿ ತರಬೇತಿ ಮತ್ತು ನಾವೀನ್ಯತಾ ಮಾದರಿಗಳನ್ನು ಈ ಯೋಜನೆ ಸಾಧ್ಯವಾಗಿಸಿದೆ ಎಂದರು.
ನಗರ ಮತ್ತು ಗ್ರಾಮೀಣ ಜನಸಂಖ್ಯೆಗೆ ಸೇವಾ ಲಭ್ಯತೆಯಲ್ಲಿ ಏಕರೂಪತೆ ತರಲು ರಾಜ್ಯ ಸರ್ಕಾರವು ಮಾನಸಿಕ ಆರೋಗ್ಯವನ್ನು ಪ್ರಾಥಮಿಕ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಸಂಯೋಜಿಸಿದೆ. ನಿಮ್ಹಾನ್ಸ್ ಸಂಸ್ಥೆಯ ಕಾರ್ಯನಿರ್ವಹಣೆಗಾಗಿ ಪ್ರತಿವರ್ಷ 137 ಕೋಟಿ ರೂ.ಗಳನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ನಿರೂಪಿಸಿದೆ. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಈ ಸಾರ್ವಜನಿಕ – ಖಾಸಗಿ ಸಹಭಾಗಿತ್ವ ಮೈಲಿಗಲ್ಲು ಸಾಧನೆಗಳನ್ನು ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಲದಮರ ಫೌಂಡೇಶನ್ ಸಹಯೋಗದೊಂದಿಗೆ ಬೆಂಗಳೂರಿನ ಸರ್ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ 25 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸೆ ಹಾಗೂ ರಿಕವರಿ ಕೇಂದ್ರವು ಮಾನಸಿಕ ಕಾಯಿಲೆಯಿಂದ ಬಳಲುವ ನಿರ್ಗತಿಕರಿಗೆ ಪುನವರ್ಸತಿಯನ್ನು ಕಲ್ಪಿಸಿದೆ ಎಂದು ಹೇಳಿದರು.
ಜಿಲ್ಲಾ ಉಪಕೇಂದ್ರ ಆಸ್ಪತ್ರೆಗಳಲ್ಲಿ ಮನೋಚೈತನ್ಯ ಮಾನಸಿಕ ಆರೋಗ್ಯ ಚಿಕಿತ್ಸಾ ಕಾರ್ಯಕ್ರಮಗಳ ಮೂಲಕ 146 ತಾಲ್ಲೂಕುಗಳ ಐದು ಲಕ್ಷ ಜನರಿಗೆ ಉಪಯೋಗವಾಗಿದೆ. ಅಲ್ಲದೇ, ಆರ್.ಸಿ.ಎಚ್, ಆರ್‌ಬಿಎಸ್‌ಕೆ ಮತ್ತು ಆರ್‌ಕೆಎಸ್‌ಕೆ ಸಹಭಾಗಿತ್ವದೊಂದಿಗೆ ತಾಯಿ, ಮಗು ಮತ್ತು ಕಿಶೋರ ಮಾನಸಿಕ ಆರೋಗ್ಯ ಸೇವೆಗಳ ಪೂರೈಸಲು ಕ್ರಮವಹಿಸಲಾಗುತ್ತಿದೆ. ಮಾನಸಿಕ ಆರೋಗ್ಯದೆಡೆಗೆ ಕರ್ನಾಟಕದ ನಡೆಯು ಆರೋಗ್ಯ ಸೇವೆಯ ಲಭ್ಯತೆ, ನಾವಿನ್ಯತೆ ಮತ್ತು ಸಹಾನುಭೂತಿಯನ್ನೊಳಗೊಂಡ ಸಮಗ್ರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಮಾನಸಿಕ ಆರೋಗ್ಯದ ಸವಾಲುಗಳನ್ನು ಸಮಗ್ರವಾಗಿ ಎದುರಿಸುವ ನಮ್ಮ ಪ್ರಯತ್ನದಲ್ಲಿ ನಮ್ಮನ್ನು ಮುಂಚೂಣಿಯಲ್ಲಿರಿಸಿದೆ ಎಂದು ತಿಳಿಸಿದರು.
ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ಬಂದಿದ್ದು, ದೇಶದ ಪ್ರಮುಖ ಸಂಸ್ಥೆಯಾಗಿ ತನ್ನ ಛಾಪು ಮೂಡಿಸಿದೆ. ಮೈಸೂರು ಸರ್ಕಾರದ ಮಾನಸಿಕ ಆಸ್ಪತ್ರೆ ಮತ್ತು ಭಾರತೀಯ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಒಗ್ಗೂಡಿಸುವ ಮೂಲಕ ಪ್ರಾರಂಭವಾದ ನಿಮ್ಹಾನ್ಸ್, ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ ಭಾರತದ ಪ್ರಪ್ರಥಮ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದೆ. ರಾಷ್ಟ್ರೀಯ ಮಹತ್ವವನ್ನು ಹೊಂದಿರುವ ಈ ಸಂಸ್ಥೆಯು ತನ್ನ ಐದು ದಶಕದ ಪಯಣದಲ್ಲಿ ಆರೈಕೆ, ಸಂಶೋಧನೆ ಮತ್ತು ಶಿಕ್ಷಣ ವಲಯದಲ್ಲಿ ವಿಶ್ವದ ಗಮನ ಸೆಳೆದಿದೆ. ಮಾನಸಿಕ ಆರೋಗ್ಯ ಕುರಿತಾದ ನೀತಿ ನಿರೂಪಣೆಯಲ್ಲಿ ನಿಮ್ಹಾನ್ಸ್ ಕೊಡುಗೆಯನ್ನು ಜಾಗತಿಕವಾಗಿ ಗುರುತಿಸಲಾಗಿರುವುದು ಹೆಮ್ಮೆಯ ಸಂಗತಿ ಎಂದರು.
ಸಮಾರಂಭದಲ್ಲಿ ರಾಷ್ಡ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಜೆಪಿ ನಡ್ಡಾ, ರಾಜ್ಯ ವೈದ್ಯಕೀಯ ಶಿಕ್ಷಣ ಶರಣ್ ಪ್ರಕಾಶ್ ಪಾಟೀಲ್, ಸಂಸದರಾದ ಪಿ.ಸಿ.ಮೋಹನ್, ಡಾ.ಸಿ.ಎನ್. ಮಂಜುನಾಥ್ ನಿಮ್ಹಾನ್ಸ್ ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.