ಮಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೆಕ್ಕೆಜೋಳವನ್ನು ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲು ವ್ಯವಸ್ಥೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಮನವಿ ಮಾಡಿಕೊಂಡರು.
ಈ ವಿಷಯವನ್ನು ಟ್ವೀಟ್ ಮೂಲಕ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಗೌರವಾನ್ವಿತ ಪ್ರಧಾನಿ @narendramodi ಯವರು ಇಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಪೂರ್ವಕವಾಗಿ ಸ್ವಾಗತಿಸಿದೆ.
ಮಾನ್ಯ ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಿ, ಅದರಲ್ಲಿರುವಂತೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ಇದಾಗಿದೆ ಎಂದು ತಿಳಿಸಿ, ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಯಿತು.
ಈ ಪತ್ರದಲ್ಲಿರುವಂತೆ ನಮ್ಮ ರಾಜ್ಯದ ರೈತರ ಸಂಕಷ್ಟವನ್ನು ಕೂಲಂಕಷವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರಿಸಿದ್ದೇನೆ. ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು (ಮೂಂಗ್) ಬೆಳೆಗಳ ತೀವ್ರ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ ಕಾರಣ ಈ ಬಗ್ಗೆ ನಿಮ್ಮ ಗಮನಕ್ಕೆ ತಂದು ಬೆಂಬಲ ಬೆಲೆಯಲ್ಲಿ ರೈತರಬೆಳೆಗಳನ್ನು ಖರೀದಿಸುವಂತಹ ವ್ಯವಸ್ಥೆ ನಿರ್ಮಾಣ ಮಾಡುವ ಕುರಿತು ಈ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

