ಶಿವಮೊಗ್ಗ: ಸಾಗರದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ಶಿವಮೊಗ್ಗ ಜಿಲ್ಲಾಡಳಿತ, ಏರ್ಪಡಿಸಿದ್ದ ತಾಲ್ಲೂಕು ಮಟ್ಟದ “ಪ್ರಜಾಸೇವೆ ಆಂದೋಲನ” ಸಭೆಯನ್ನು ಶಿಕ್ಷಣ ಸಚಿವ, ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಕಚೇರಿಗಳಿಗೆ ಜನರ ಅಲೆದಾಟವನ್ನು ತಪ್ಪಿಸುವ ಉದ್ದೇಶದಿಂದ ನಮ್ಮ ಸರ್ಕಾರ ಈ ಆಂದೋಲನ ಸಭೆ ನಡೆಸುತ್ತಿದ್ದು, ಇದಕ್ಕಾಗಿಯೇ ಪ್ರತ್ಯೇಕವಾದ ಹೊಸ ಇಲಾಖೆಯನ್ನು ಆರಂಭಿಸಲಾಗಿದೆ ಎಂದು ವಿವರಿಸಿದರು.
ಸ್ಥಳೀಯ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರೊಂದಿಗೆ ಸುಮಾರು ನಾಲ್ಕು ತಾಸು, ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿದ ಸಚಿವರು, ಸಾರ್ವಜನಿಕರ ಸಮಸ್ಯೆಗಳಿಗೆ ಅಗತ್ಯಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದವು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಿಷಿ ಆನಂದ್, ಜಿಲ್ಲಾ ರಕ್ಷಣಾಧಿಕಾರಿ ಶ್ರೀ ನಿಖಿಲ್ ಬಿ, ವಿಭಾಗೀಯ ಅರಣ್ಯ ಅಧಿಕಾರಿ ಶ್ರೀ ಮೊಹಮ್ಮದ್ ಫಯಾಜುದ್ದೀನ್ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

