ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ನಾಟಕ ಆರಂಭವಾಗಿದೆ. ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ, ಹಾಗೂ ಕೃಷಿ ಮಾರುಕಟ್ಟೆ ಸಚಿವ, ಬಸವನಬಾಗೇವಾಡಿ ಕ್ಷೇತ್ರದ ಪ್ರತಿನಿಧಿಯೂ ಆಗಿರುವ ಶಿವಾನಂದ ಎಸ್ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಇಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲನ್ನು ಸ್ವೀಕರಿಸಿ ರಾಜೀನಾಮೆ ಸಲ್ಲಿಸಿರುವುದಾಗಿ ಪಾಟೀಲ್ ಅವರು ತಿಳಿಸಿದ್ದಾರೆ. ಯತ್ನಾಳ್ ಅವರು ಕೀಳು ಮಟ್ಟದ ಭಾಷೆ ಬಳಸಿ ಸವಾಲು ಹಾಕಿದ್ದಾರೆ. ರಾಜೀನಾಮೆ ಸಲ್ಲಿಸಿ ಚುನಾವಣೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ. ಅವರ ಸವಾಲು ಸ್ವೀಕರಿಸಿ ಅವರಿಗಿಂತ ಮುಂಚಿತವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಯತ್ನಾಳ್ ಅವರು ನಮ್ಮ ಪೂರ್ವಜರ ಮನೆತನದ ಹೆಸರಿನ ಬಗ್ಗೆ ತಪ್ಪಾಗಿ ಮಾತನಾಡಿದ್ದರು. ಅವರೂ ಸಹ ರಾಜೀನಾಮೆ ನೀಡಿ ಚುನಾವಣೆ ಎದುರಿಸಬೇಕು. ಅವರು ರಾಜೀನಾಮೆ ನೀಡಿ ಅದು ಅಂಗೀಕಾರವಾದರೆ ಮಾತ್ರ ತಮ್ಮ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ ಹೇಳಿದ್ದಾರೆ.
‘ವಿಜಯಪುರ ನಗರ ಕ್ಷೇತ್ರದ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ’ ಎಂದು ಸ್ಪೀಕರ್ ಯುಟಿ ಖಾದರ್‌ಗೆ ಬರೆದ ಪತ್ರದಲ್ಲಿ ಶಿವಾನಂದ ಪಾಟೀಲ್ ಉಲ್ಲೇಖಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಈ ಸವಾಲನ್ನು ಸ್ವೀಕರಿಸಿ ರಾಜೀನಾಮೆ ನೀಡುವರೇ ಎಂದು ಕಾದು ನೋಡಬೇಕಿದೆ.