ನವದೆಹಲಿ: ರಾಜ್ಯ ಬಿಜೆಪಿ ನಾಯಕರಿಗೆ ಅದರಲ್ಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಗನಿಗೆ ಸೆಡ್ಡು ಹೊಡೆದಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಘಟಕದಲ್ಲಿನ ಬಣ ಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಇತಿಶ್ರೀ ಹಾಡಿದೆ. ಇನ್ನು ಮುಂದಾದರೂ ಪಕ್ಷ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಬೀಳುತ್ತದೆ ಎಂದು ನಿರೀಕ್ಷಿಸಲಾಗಿದೆ.
ಯತ್ನಾಳ್ ಅವರು, ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡುತ್ತಾ ತಮ್ಮದೇ ಒಂದು ತಂಡವನ್ನು ಕಟ್ಟಿಕೊಂಡು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ತಮ್ಮ ನಡವಳಿಕೆಯನ್ನು ಸರಿಪಡಿಸಿಕೊಂಡಿರಲಿಲ್ಲ. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಲಾಗಿದೆ. ಈ ಹಿಂದಿನ ಶೋಕಾಸ್ ನೋಟಿಸ್ ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀವು ನೀಡಿದ್ದರೂ ಸಹ, ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಹುದ್ದೆಯಿಂದ ನಿಮ್ಮನ್ನು ಮುಕ್ತಗೊಳಿಸಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.