ಗದಗ : ಬಿಜೆಪಿ ಶಾಸಕ ಚಂದ್ರು ಲಮಾಣಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿಗೆ 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದೆ. ಶಾಸಕರಿಗೆ ಸೇರಿದ ಲಕ್ಷ್ಮೀಶ್ವರದ ಬಾಲಾಜಿ ಆಸ್ಪತ್ರೆಯಲ್ಲಿ ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ.
ಶಾಸಕರೊಂದಿಗೆ ಪಿಎಗಳಾದ ಮಂಜುನಾಥ್, ಗುರು ಲಮಾಣಿ ಅವರುಗಳನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ನೀರಾವರಿ ಇಲಾಖೆಯ 1 ಕೋಟಿ ರೂಪಾಯಿ ಕಾಮಗಾರಿ ಗುತ್ತಿಗೆ ನೀಡಲು 11ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.


