ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನಾಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ ನಡೆಯುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಬರ ಪರಿಹಾರ ತತ್‌ಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ಈ ಪ್ರತಿಭಟನೆಯಲ್ಲಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಖಂಡಿಸುವ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಕೂಡ ಭಾಗಿಯಾಗಿದ್ದಾರೆ.
ಇದೆ ವೇಳೆ ಮಾತನಾಡಿದ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ, ರೈತರಿಗೆ ಕೇಂದ್ರ ಸರಕಾರಕ್ಕೆ ಅನ್ಯಾಯ ಮಾಡಿದ್ದಾರೆ. ಹೀಗಾಗಿಯೇ ನಾವು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದ್ದೇವೆ. ೧೮೦೦೦ ಸಾವಿರ ಕೋಟಿ ಬರ ಪರಿಹಾರ ಹಣ ಕೇಳಿದ್ದೇವೆ. ಬರ ಪರಿಹಾರ ಹಣ ಬಿಡುಗಡೆಯಾಗುವವರೆಗೂ ಮೋದಿ, ಅಮಿತ್ ಷಾ ಕರ್ನಾಟಕದ ನೆಲಕ್ಕೆ ಕಾಲು ಇಡಬಾರದು. ಭದ್ರಾ ಮೇಲ್ಡಂಡೆ ಯೋಜನೆಗೆ ಅನುದಾನ ಕೊಟ್ಟಿಲ್ಲ. ಕರ್ನಾಟಕಕ್ಕೆ ಕೇಂದ್ರ ಬಿಜೆಪಿ ಸರ್ಕಾರ ದೊಡ್ಡ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ.