ಮುಡಾ ಪ್ರಕರಣ:ಸಿದ್ದರಾಮಯ್ಯ ಅವರ ಮೇಲ್ಮನವಿ ಅರ್ಜಿ ವಿಚಾರಣೆ ನ.23ಕ್ಕೆ ನಿಗದಿ

Most read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಬದಲಿ ನಿವೇಶನ ಪಡೆದಿರುವ ಆರೋಪದ ವಿಚಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನ. 23ರಂದು ನಡೆಯಲಿದೆ.


ಇಂದು ಹೈಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ದ ಪೀಠಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ, ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಇದುವರೆಗೂ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ. ಅಲ್ಲದೆ, ಮೇಲ್ಮನವಿ ವಿಚಾರಣೆ ತುರ್ತಾಗಿ ನಡೆಯಬೇಕಿದ್ದು ವಿಚಾರಣೆಗೆ ದಿನಾಂಕ ನಿಗದಿ ಪಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ ಇದೇ 23ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿತು.

2024ರ ಆ.16ರಂದು ಮುಡಾ ಹಗರಣ ಕುರಿತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಪೊಲೀಸ್ ತನಿಖೆ ಮತ್ತು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 203ರ ಸೆಕ್ಷನ್218 ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣದ ತನಿಖೆಗೆ ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದು ಎಂದು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿತ್ತು. ಆದರೂ ರಾಜ್ಯಪಾಲರು ತನಿಖೆಗೆ ಆದೇಶ ಮಾಡಿದ್ದಾರೆ. ಸಚಿವ ಸಂಪುಟದ ನಿರ್ಣಯವನ್ನು ಪರಿಗಣಿಸದೆ ಪ್ರಕರಣದ ತನಿಖೆಗೆ ರಾಜ್ಯಪಾಲರು ಆತುರದ ಅನುಮತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಾಸಿಕ್ಯೂಷನ್‌ ಗೆ ಆದೇಶ ಹೊರಡಿಸಲು ಸಮಂಜಸವಾದ ಕಾರಣಗಳನ್ನು ನೀಡಿಲ್ಲ ಎಂದು ಮೇಲ್ಮನವಿಯಲ್ಲಿ ಆಕ್ಷೇಪಿಸ ವಯ್ಕತಪಡಿಸಲಾಗಿದೆ. ಸಂಪುಟದ ಸಲಹೆ ಮತ್ತು ಸೂಚನೆ ಆಧಾರದಲ್ಲಿ ರಾಜ್ಯಪಾಲರು ಕಾರ್ಯ ನಿರ್ವಹಿಸಬೇಕು ಎಂದು ಸಂವಿಧಾನದ ಪರಿಚ್ಛೇದ 163 ಸ್ಪಷ್ಟವಾಗಿ ಹೇಳುತ್ತದೆ. ಆ ಪರಿಚ್ಛೇದವೂ ಸೇರಿದಂತೆ ಸಾಂವಿಧಾನಿಕ ಅಂಶಗಳನ್ನು ಕಡೆಗಣಿಸಿ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಹಾಗಾಗಿ, ರಾಜ್ಯಪಾಲರ ಪೂರ್ವಾನುಮತಿಯೇ ನಿರಂಕುಶ, ಅಸಾಂವಿಧಾನಿಕ ಮತ್ತು ಅಕ್ರಮವಾಗಿದೆ. ಅಂತಹ ಆದೇಶವನ್ನು ಪುರಸ್ಕರಿಸಿರುವ ಏಕಸದಸ್ಯ ಪೀಠದ ತೀರ್ಪು ಸಹ ಸಂಪೂರ್ಣವಾಗಿ ದೋಷಪೂರಿತವಾಗಿದೆ ಎಂದು ಮೇಲ್ಮನವಿಯಲ್ಲಿ ಮುಖ್ಯಮಂತ್ರಿಗಳ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ವಿವರ:
ಮುಡಾ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶ ಹೊರಡಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅಂದೇ ರಾಜ್ಯಪಾಲರ ಆದೇಶ ಆಧರಿಸಿ ಮುಖ್ಯಮಂತ್ರಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಮಾಡಿತ್ತು.ಸೆ.12ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಸೆ.24ರಂದು ಮುಖ್ಯಮಂತ್ರಿಯ ಅರ್ಜಿ ವಜಾಗೊಳಿಸಿ, ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸ್ ತನಿಖೆ ನಡೆಸಲು ಅನುಮತಿ ನೀಡಿ ತೀರ್ಪು ಪ್ರಕಟಿಸಿತ್ತು.

More articles

Latest article