ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗದಿಂದ ಸಿಎಂ ಸಿದ್ದರಾಮಯ್ಯಗೆ ಭೇಟಿ, ಮನವಿ

Most read

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರ, ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ  ನಡೆಸಲಾಗಿದ್ದು, ಈ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಮುಖ್ಯಮಂತ್ರಿಗಳನ್ನು ಟಿ.ಎ.ನಾರಾಯಣಗೌಡ ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ತಾಯಿನಾಡು ಕರ್ನಾಟಕ ದೇಶದಲ್ಲೇ ಅತಿಹೆಚ್ಚು ಭೌಗೋಳಿಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯ. ಪ್ರಕೃತಿ ಸೌಂದರ್ಯಕ್ಕೆ, ಅತ್ಯುತ್ತಮ ಹವಾಗುಣಕ್ಕೆ ಹೆಸರಾದ ರಾಜ್ಯ. ಕನ್ನಡಿಗರು ಶಾಂತಿಪ್ರಿಯರು, ಹೃದಯ ಶ್ರೀಮಂತರು. ಕನ್ನಡಿಗರು ದೇಶದಲ್ಲೇ ಮೊದಲು ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕಿದವರು. ಕನ್ನಡ ನಾಡು ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ, ಚಾರಿತ್ರಿಕವಾಗಿ ವೈಭವದ ಇತಿಹಾಸವನ್ನು ಹೊಂದಿದ ನಾಡು. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಇಂಥ ಸಕಲ ಸಮೃದ್ಧಿಯ ನಾಡಿಗೆ ಇತರ ರಾಜ್ಯಗಳಿಂದ ದೊಡ್ಡ ಪ್ರಮಾಣದ ವಲಸೆ ಅವ್ಯಾಹತವಾಗಿ ನಡೆದುಕೊಂಡುಬಂದಿದೆ. ಇತ್ತೀಚಿನ ಎರಡು ಮೂರು ದಶಕಗಳಲ್ಲಿ ಇದು ತಾರಕಕ್ಕೆ ಏರಿದೆ. ಮೊದಲು ದಕ್ಷಿಣ ಭಾರತದ ಇತರ ರಾಜ್ಯಗಳಿಂದ ಜನರು ವಲಸೆ ಬಂದು ಇಲ್ಲಿ ನೆಲೆ ನಿಂತರು. ಈಗ ಉತ್ತರದ ರಾಜ್ಯಗಳು, ಈಶಾನ್ಯ ರಾಜ್ಯಗಳಿಂದ ಜನರ ಪ್ರವಾಹವೇ ಹರಿದುಬರುತ್ತಿದೆ. ವಿಶೇಷವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರಿನಂಥ ಮಹಾನಗರಗಳಲ್ಲಿ ವಲಸೆ ಪ್ರಮಾಣ ಮಿತಿ ಮೀರಿದೆ ಎಂದು ಹೇಳಿದ್ದಾರೆ.

ವಲಸೆಯ ದುಷ್ಪರಿಣಾಮದಿಂದಾಗಿ ಕನ್ನಡ ನಾಡಿನ ಭೌಗೋಳಿಕ, ಸಾಮಾಜಿಕ, ರಾಜಕೀಯ ಚಹರೆಯೇ ಬದಲಾಗುತ್ತಿದೆ. ವಿಶೇಷವಾಗಿ ರಾಜ್ಯದ ರಾಜಧಾನಿ ಬೆಂಗಳೂರು ಈ ದೊಡ್ಡ ಪ್ರಮಾಣದ ವಲಸೆಯಿಂದ ಬಸವಳಿದು ಹೋಗುತ್ತಿದೆ. ಈ ಮಹಾವಲಸೆಯ ಬಹುಮುಖ್ಯ ದುಷ್ಪರಿಣಾಮ ಕನ್ನಡದ ಯುವಸಮುದಾಯದ ಮೇಲೆ ಆಗುತ್ತಿದೆ. ಕನ್ನಡಿಗರಿಗೆ ಈಗ ಉದ್ಯೋಗವಿಲ್ಲದಂತಾಗಿದೆ. ಕನ್ನಡದ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿದ್ದು, ಅವರು ತಮ್ಮ ತಮ್ಮ ರಾಜ್ಯದ ಯುವಕ ಯುವತಿಯರನ್ನು ಕರೆತಂದು ಕೆಲಸ ಕೊಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರ ಪ್ರಮಾಣ ದಿನೇದಿನೇ ಕುಸಿಯುತ್ತಲೇ ಬರುತ್ತಿದೆ. ಹೀಗೇ ಮುಂದುವರೆದರೆ ಕನ್ನಡಿಗರು ಮುಂಬರುವ ದಿನಗಳಲ್ಲಿ ತಮ್ಮ ನೆಲದಲ್ಲಿ ತಾವೇ ಅತಂತ್ರರಾಗಿ ನರಕಯಾತನೆ ಅನುಭವಿಸುವ ಸ್ಥಿತಿ ಬಂದೊದಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಂಥ ಸಂದರ್ಭದಲ್ಲಿ ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ದಕ್ಕಬೇಕು ಎಂದು ನಾವೆಲ್ಲ ದಶಕಗಳಿಂದ ಹೋರಾಡುತ್ತ ಬಂದಿದ್ದೇವೆ. ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟವನ್ನು ರಾಜ್ಯದ ಮೂಲೆಮೂಲೆಯಲ್ಲೂ ಸಂಘಟಿಸುತ್ತ ಬಂದಿದೆ. 2014ರಲ್ಲಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಿಂದ ವಿಧಾನಸೌಧದವರೆಗೆ ಬಹುದೊಡ್ಡ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿತ್ತು. ಆದರೆ ನಮ್ಮ ಕೂಗಿಗೆ ಇದುವರೆಗೆ ರಾಜ್ಯ ಸರ್ಕಾರಗಳು ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರ 1983ರಲ್ಲಿ ಡಾ. ಸರೋಜಿನಿ ಮಹಿಷಿ ಅವರ ನೇತೃತ್ವದಲ್ಲಿ ಒಂದು ಸಮಿತಿಯೊಂದನ್ನು ರಚಿಸಿ ರಾಜ್ಯದಲ್ಲಿ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಮಾನದಂಡಗಳನ್ನು ಶಿಫಾರಸು ಮಾಡಲು ಸೂಚಿಸಿದ ನಂತರ ಸಮಿತಿಯು 13-6-1984 ರಂದು ಮಧ್ಯಂತರ ವರದಿಯನ್ನು ಮತ್ತು 30-12-1986 ರಂದು ಅಂತಿಮ ವರದಿಯನ್ನು ಸಲ್ಲಿಸಿತು. ಸಮಿತಿಯು ಒಟ್ಟು 58 ಶಿಫಾರಸುಗಳನ್ನು ಮಾಡಿತು. ಈ ಶಿಫಾರಸುಗಳಲ್ಲಿ, ಕರ್ನಾಟಕ ಸರ್ಕಾರವು 45 ಶಿಫಾರಸುಗಳನ್ನು ಅಂಗೀಕರಿಸಿದೆ ಎಂದು ಹೇಳಿದ್ದಾರೆ.

ಎಲ್ಲಾ ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಲ್ಲಿ (ಪಿ ಎಸ್ ಯು) ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಘಟಕಗಳು ಮತ್ತು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಲ್ಲಿ ಅನುಕ್ರಮವಾಗಿ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಎ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಕನಿಷ್ಠ 80 ಪ್ರತಿಶತ ಮತ್ತು 65 ಮೀಸಲಾತಿ ನೀಡಬೇಕು ಎಂದು ಸಮಿತಿಯು ಶಿಫಾರಸು ನೀಡಿತ್ತು ಎಂದಿದೆ.

ಆದರೆ ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಲೇ ಇಲ್ಲ. ಸರ್ಕಾರ ಜಾರಿ ಮಾಡಿದ ಕೆಲವು ಅಂಶಗಳನ್ನು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಸಂಸ್ಥೆಗಳು ರಾಜ್ಯ ಸರ್ಕಾರದ ಕಾನೂನನ್ನು ಗಾಳಿಗೆ ತೂರಿ ಬೇರೆ ರಾಜ್ಯಗಳ ನೌಕರರನ್ನೇ ನೇಮಿಸಿಕೊಂಡುಬರುತ್ತಿವೆ. 2019ರಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಸ್ಥಾಯಿ ಆದೇಶದ ನಿಯಮಗಳಿಗೆ ಬದಲಾವಣೆ ಮಾಡಿ ಕನ್ನಡಿಗರಿಗೆ  ಉದ್ಯೋಗದಲ್ಲಿ ಆದ್ಯತೆ ಒದಗಿಸಲು ಖಾಸಗಿ ವಲಯಕ್ಕೆ ಸೂಚಿಸಿತಾದರೂ ಎಷ್ಟು ಪ್ರಮಾಣದಲ್ಲಿ ಆದ್ಯತೆ ನೀಡಬೇಕು ಎಂಬುದು ಸ್ಪಷ್ಟವಿರಲಿಲ್ಲ. ಹೀಗಾಗಿ ಈ ಕಾನೂನಿಗೆ ಯಾವ ಬಲವೂ ಇರಲಿಲ್ಲ, ಅರ್ಥವೂ ಇರಲಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಪ್ರಕಾರ ಆಯಾ ರಾಜ್ಯಗಳಲ್ಲಿ ನಿಯಮಾವಳಿ ರೂಪಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಇರುತ್ತದೆ. ರಾಜ್ಯ ಸರ್ಕಾರವು ರೂಪಿಸುವ ಕಾನೂನನ್ನು 50 ಕ್ಕೂ ಹೆಚ್ಚು ಮಂದಿ ನೌಕರರನ್ನು ಹೊಂದಿರುವ ಕೈಗಾರಿಕೆಗಳನ್ನು ಪಾಲಿಸಬೇಕಾಗುತ್ತದೆ.  ಈ ಕಾಯ್ದೆಯಡಿ ರಾಜ್ಯ ಸರ್ಕಾರ ಪ್ರತ್ಯೇಕ ಕಾನೂನನ್ನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಜಾರಿ ಮಾಡಬಹುದಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಇಚ್ಛಾಶಕ್ತಿಯನ್ನು ತೋರಬೇಕು ಮತ್ತು ಕಾನೂನು ರೂಪಿಸುವ ವೇಳೆ ಎಚ್ಚರಿಕೆಯನ್ನು ವಹಿಸಿ ನ್ಯಾಯಾಲಯಗಳಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದಿನಾಂಕ 1-7-2024ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡು, ಆದಷ್ಟು ಶೀಘ್ರವೇ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತಿದ್ದೇವೆ.

ನಮ್ಮ ಹಕ್ಕೊತ್ತಾಯಗಳು:

1.         ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು.

2.         ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.

3.         ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು

4.         ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

5.         ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು.

6.         ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು.

7.         ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು.

8.         ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ. 90ರಷ್ಟು ಮೀಸಲಾತಿ ನೀಡಬೇಕು.

9.         ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.

10.       ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು.

ಕನ್ನಡ ನಾಮಫಲಕ ಕಡ್ಡಾಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡ ಹೋರಾಟದ ನಂತರ ತಾವು ಕನ್ನಡಿಗರ ಬೇಡಿಕೆಗಳಿಗೆ ಸ್ಪಂದಿಸಿ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಿದ್ದಿರಿ. ಇದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತ ಉದ್ಯೋಗಕ್ಕೆ ಸಂಬಂಧಿಸಿದ ಕಾಯ್ದೆಯನ್ನೂ ತಾವು ಜಾರಿ ಮಾಡಿದರೆ ತಮ್ಮನ್ನು ಕನ್ನಡದ ಮುಂದಿನ ಪೀಳಿಗೆ ಕೃತಜ್ಞತೆಯಿಂದ ನೆನೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕೂಡಲೇ ಕಾಯ್ದೆ ಜಾರಿಮಾಡುವಂತೆ ಈ ಮೂಲಕ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

 

More articles

Latest article