ಬೆಂಗಳೂರು, ಅ.28 : ರಾಜ್ಯ ವಿಧಾನ ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಮೇಲುಗೈ ಸಾಧಿಸಿದೆ. ಚುನಾವಣೆ ನಡೆದ ನಾಲ್ಕೂ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲು ಎದುರಾಗಿದೆ.
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ವಿರುದ್ಧ 23,098 ಮತಗಳ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಸುರೇಶ್ 66,020 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 42,922 ಮತಗಳನ್ನು ಗಳಿಸಿದ್ದಾರೆ. ಒಟ್ಟು 1,32,138 ಮತಗಳ ಪೈಕಿ 20,076 ಮತಗಳು ತಿರಸ್ಕೃತಗೊಂಡಿವೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್ಗೆ ಜಯ
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಂಗನಾಥ್ 10,810 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಪುಟ್ಟಣ್ಣ 9,902 ಮತಗಳನ್ನು ಗಳಿಸಿದ್ದಾರೆ. ಫಲಿತಾಂಶದ ಬೆನ್ನಲ್ಲೇ ಎನ್ಡಿಎ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಸತತ ಮೂರನೇ ಗೆಲುವು ದಾಖಲಿಸಿದ ಸಂಕನೂರ
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಅವರು ಸತತ ಮೂರನೇ ಬಾರಿ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು 9,323 ಮತಗಳ ಅಂತರದಿಂದ ಸೋಲಿಸಿದ ಸಂಕನೂರ, ಪ್ರಥಮ ಪ್ರಾಶಸ್ತ್ಯದ ಮತಗಳ ಆಧಾರದಲ್ಲೇ ಗೆಲುವು ಖಚಿತಪಡಿಸಿಕೊಂಡಿದ್ದಾರೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ 27ರ ಬೆಳಗ್ಗೆ ಆರಂಭವಾದ ಮತ ಎಣಿಕೆ ಪ್ರಕ್ರಿಯೆ ಅಕ್ಟೋಬರ್ 28ರ ಮಧ್ಯರಾತ್ರಿ 2 ಗಂಟೆಗೆ ಮುಕ್ತಾಯಗೊಂಡಿತು.

