ಬೆಂಗಳೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಸಣ್ಣ ನೀರಾವರಿ ಇಲಾಖೆಯಿಂದ 490 ಕೋಟಿ ಅನುದಾನವನ್ನು ಪ್ರಸ್ತುತ ವರ್ಷದ ಆಯವ್ಯಯದಲ್ಲಿ ಮೀಸಲಿಟ್ಟಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನಸಭಾ ಸದಸ್ಯ ಮಂಜುನಾಥ್ ಎಂ.ಆರ್. ಅವರು ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ ಅಂತರ್ಜಲ ಹೆಚ್ಚಿಸಲಿಕ್ಕೆ ರೂಪುರೇಷೆಗಳನ್ನು ರಚಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನಿಸಿದರು.
ಈ ಸಮಯದಲ್ಲಿ ಸದಸ್ಯರ ಪ್ರಶ್ನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಪರವಾಗಿ ಉತ್ತರಿಸಿದ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಅಂತರ್ಜಲ ಮಟ್ಟವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನೀರಾವರಿ ಕೆರೆಗಳು, ಪಿಕಪ್ ಚೆಕ್ ಡ್ಯಾಂ ನಿರ್ಮಾಣ, ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಯೋಜನೆ ಹಾಗೂ ಇತ್ಯಾದಿ ಯೋಜನೆಗಳನ್ನು ಕೈಗೊಳ್ಳಲಾಗಿರುತ್ತದೆ.
ಕಳೆದ 4 ವರ್ಷಗಳಲ್ಲಿ 9 ಕೋಟಿಗಿಂತ ಹೆಚ್ಚು ಅನುದಾನವನ್ನು ಹನೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಲಾಗಿದೆ, ಅಲ್ಲದೇ ಪ್ರಸ್ತುತ ಬಜೆಟ್ ನಲ್ಲಿ 490 ಕೋಟಿ ಅನುದಾನವನ್ನು ಮೀಸಲಿರಿಸಿದೆ ಎಂದು ತಿಳಿಸಿದರು.

