ಬೆಂಗಳೂರು, ನ.02 : ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ವಿರುದ್ಧ ನಡೆದಿರುವ ಸ್ಟಿಂಗ್ ಕಾರ್ಯಾಚರಣೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸ್ಟಿಂಗ್ ವಿಡಿಯೊ ಅಪ್‌ಲೋಡ್ ಮಾಡಲು ಬಳಸಿದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲೇ ಆರೋಪಿಗಳಿಗೆ ಹಸ್ತಾಂತರಿಸಲಾಗಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಅಕ್ಟೋಬರ್ 24ರಂದು ಸಿಸಿಬಿ ಪೊಲೀಸರು ನವದೆಹಲಿಯಲ್ಲಿ ಆರೋಪಿ ರಿತೇಶ್ ಪಾಂಡೆ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಮಾಹಿತಿ ಲಭ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಕರಣದಲ್ಲಿ ರಿತೇಶ್ ಪಾಂಡೆ ಜೊತೆಗೆ ವಿನೋದ್ ಶರ್ಮಾ ಮತ್ತು ಪ್ರಜ್ವಲ್ ಪ್ರಸಾದ್ ಕೂಡ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಪ್ರಜ್ವಲ್ ಪ್ರಸಾದ್ ಸೂಚನೆಯಂತೆ ವಿನೋದ್ ಶರ್ಮಾ ಮತ್ತು ರಿತೇಶ್ ಪಾಂಡೆ ನವದೆಹಲಿಯ ಕರೋಲ್ ಬಾಗ್ ಮಾರುಕಟ್ಟೆಯಲ್ಲಿ ಮೊಬೈಲ್ ಫೋನ್‌ಗಳನ್ನು ಖರೀದಿಸಿದ್ದರು ಎನ್ನಲಾಗಿದೆ.
ನಂತರ ಖರೀದಿಸಿದ ಮೊಬೈಲ್‌ಗಳನ್ನು ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ಪ್ರಜ್ವಲ್ ಪ್ರಸಾದ್‌ಗೆ ಹಸ್ತಾಂತರಿಸಲಾಗಿತ್ತು ಎಂದು ವಿಚಾರಣೆ ವೇಳೆ ರಿತೇಶ್ ಪಾಂಡೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

