ಬೆಂಗಳೂರು: 2024 ಮುಗಿಯಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆಗೆ ಭರ್ಜರಿ ತಯಾರಿಯೂ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಭದ್ರತೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂಬಂಧ ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿದೆ. ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ನಡೆಯಬಾರದು. ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ ಅಂದಾಜು 7 ಲಕ್ಷ ಜನ ಮಧ್ಯರಾತ್ರಿ ಆಚರಣೆಯಲ್ಲಿ ಭಾಗಿಯಾಗುತ್ತಾರೆ. ಯಾವುದೇ ಅಹಿತಕರ ಘಟನೆ ನಡೆದರೆ ಸ್ಥಳಿಯ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್ಗಳ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.