ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿಯಂತ್ರಿಸದಿದ್ದರೆ ಈ ತಿಂಗಳ 20 ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಮದ್ಯ ಮಾರಾಟಗಾರರ ಸಂಘ ಎಚ್ಚರಿಕೆ ನೀಡಿದೆ.
ಭ್ರಷ್ಟಾಚಾರ ಕುರಿತು ಇಂದು ವಿಧಾನಸೌಧದಲ್ಲಿ ಮದ್ಯ ಮಾರಾಟಗಾರರ ಜೊತೆ ಅಬಕಾರಿ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಗುರುಸ್ವಾಮಿ ಭ್ರಷ್ಟಾಚಾರದ ವಿಚಾರಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ . ಭ್ರಷ್ಟಾಚಾರವನ್ನು ವಿರೋಧಿಸಿ ನವೆಂಬರ್ 20 ರಂದು ಮದ್ಯ ಮಾರಾಟ ಬಂದ್ ಗೆ ಕರೆ ನೀಡಲಾಗಿದೆ ಎಂದರು.
ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರೇ ನೇರ ಕಾರಣಕರ್ತರಾಗಿದ್ದಾರೆ. ಅಧಿಕಾರಿಗಳು ನಮ್ಮನ್ನು ಶೋಷಿಸುತ್ತಿದ್ದಾರೆ. ಲಂಚ ಕೊಟ್ಟು ಈ ಸ್ಥಳಕ್ಕೆ ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ. ಒಂದೊಂದು ಹಂತದ ಸಿಬ್ಬಂದಿಗೆ ಒಂದೊಂದು ರೀತಿಯ ಲಂಚವನ್ನು ನಿಗದಿಪಡಿಸಲಾಗಿದೆ ಎಂದು ಗುರುಸ್ವಾಮಿ ಆರೋಪಿಸಿದರು.
ಅಬಕಾರಿ ಇಲಾಖೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಮದ್ಯ ಮಾರಾಟ ವ್ಯಾಪಾರಿ ಸಂಘವು ಈಗಾಗಲೇ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಪ್ರತಿ ತಿಂಗಳೂ ಅಧಿಕಾರಿಗಳು ಲಂಚ ವಸೂಲಿ ಮಾಡುತ್ತಾರೆ ಎಂದು ವ್ಯಾಪಾರಿಗಳು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.