ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Most read

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿಯವರು ತೆರೆ ಎಳೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು ಅಪರಾಧಿ ಎಂದು ಸಾಬೀತಾಗಿಲ್ಲ. ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲವಿದೆ. ಹಾಗಾಗ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಬಿಜೆಪಿ ಯತ್ನ ವಿಫಲವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ಆರೋಪ ಸಾಬೀತಾಗಿಲ್ಲ. ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಇದೇ ರೀತಿ ಆದರೆ, ಮುಂದೆ ತೆಲಂಗಾಣ ಸಿಎಂಗೂ ಸಮಸ್ಯೆ ಮಾಡುತ್ತಾರೆ. ತೆಲಂಗಾಣ ಸಿಎಂಗೂ ರಾಜ್ಯಪಾಲರು ನೋಟಿಸ್ ನೀಡಬಹುದು. ರಾಜ್ಯಪಾಲರಿಂದ ನೋಟಿಸ್ ಕೊಟ್ಟು ಕೆಳಗೆ ಇಳಿಸಲು ಯತ್ನಿಸುತ್ತಾರೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದೆ. ಹೀಗಾಗಿ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ದೃಢ ನಿರ್ಧಾರ ಕೈಗೊಂಡಿದೆ. ನಮ್ಮ ಮುಖ್ಯಮಂತ್ರಿಗಳು ಕೆಳಗಿಳಿಸಲು ನಾವು ಬಿಡುವುದಿಲ್ಲ ಎಂದು ತಿಳಿಸಿದರು.

ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿದ್ದೆ. ಭೇಟಿ ವೇಳೆ ಪಕ್ಷ ಸಂಘಟನೆಯ ವಿಚಾರ ಕುರಿತು ಚರ್ಚಿಸಿದ್ದೇವೆ. ಬೆಳಗಾವಿ ಡಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚಿಸಲಾಗಿದೆ. ಚಿಕ್ಕೋಡಿ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಧ್ಯಕ್ಷರ ನೇಮಕ ಕುರಿತಂತೆ ಚರ್ಚೆ ನಡೆಸಲಾಗಿದೆ. ನನ್ನ ಕ್ಷೇತ್ರದಲ್ಲಿ (ಯಮಕನಮರಡಿ) ಹಲವು ನೀರಾವರಿ ಯೋಜನೆಗಳಿದ್ದು, ಅವುಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.

More articles

Latest article