ಗಣೇಶೋತ್ಸವ ಆಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ: ತುಷಾರ್ ಗಿರಿನಾಥ್

Most read

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆಗಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ದತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಕೂಡಲೆ ತೆರದು, ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು. ನಿಯೋಜಿಸಿದ ಬಳಿಕ ಅಧಿಕಾರಿಗಳ ಮಾಹಿತಿಯುಳ್ಳ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಅನುಮತಿ ಕೋರಿ ಬರುವವರಿಗೆ ಕಾಲಮಿತಿಯೊಳಗಾಗಿ ಅನುಮತಿ ಸಿಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.

ಕೆರೆಗಳ ಬಳಿಯಿರುವ ಕಲ್ಯಾಣಿಗಳನ್ನು ಸಂಪೂರ್ಣ ಸ್ವಚ್ಚತೆ ಮಾಡಬೇಕು, ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡುವುದರ ಜೊತೆಗೆ ಬ್ಯಾರಿಕೇಡಿಂಗ್, ಸಿಸಿ ಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಬೇಕೆಂದು ಸೂಚಿಸಿದರು.

ಬೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ತಂತಿಗಳ ಪರಿಶೀಲನೆ:

ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಬೆಸ್ಕಾಂನ ಅಧಿಕಾರಿ/ಸಿಬ್ಬಂದಿಗಳು ಮೆರವಣಿಗೆ ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳನ್ನು ಪರಿಶೀಲಿಸಿ, ಎಲ್ಲಿಯೂ ಯಾವುದೇ ರೀತಿಯ ಅನಾಹುತಗಳಾಗಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು.

ವಿದ್ಯುತ್ ದೀಪ ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚಿ:

ರಸ್ತೆ ಬದಿಯ ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಯಾಗಿರುವಂತೆ ಪಾಲಿಕೆ ವಿದ್ಯುತ್ ವಿಭಾಗದ ಅಧಿಕಾರಿಗಳು ನೋಡಿಕೊಳ್ಳಬೇಕು. ಮೆರವಣಿಗೆ ಸಾಗುವ ರಸ್ತೆಗಳಲ್ಲಿ ರಸ್ತೆ ಹಾಳಾಗಿದ್ದಲ್ಲಿ ಅಥವಾ ರಸ್ತೆ ಗುಂಡಿಗಳು ಬಿದ್ದಿದ್ದಲ್ಲಿ ಸ್ಥಳ ಪರಿಶೀಲಿಸಿ ಕೂಡಲೆ ಸರಿಪಡಿಸುವ ಕೆಲಸ ಮಾಡಬೇಕೆಂದು ಸೂಚಿಸಿದರು.

ಕಲ್ಯಾಣಿಗಳ ಬಳಿ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳ ವ್ಯವಸ್ಥೆ:

ಗಣೇಶ ವಿಸರ್ಜನೆ ಮಾಡುವ ಕಲ್ಯಾಣಿಗಳ ಬಳಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ವಿಸರ್ಜನಾ ಸ್ಥಳದಲ್ಲಿ ಏನಾದರು ಅವಘಡಗಳು ನಡೆದರೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಸಲುವಾಗಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ‌ ವಾಹನಗಳ ವ್ಯವಸ್ಥೆ ಮಾಡಿಕೊಂಡಿರಲು ಸೂಚಿಸಲಾಯಿತು.

ಡ್ರೆಸ್ ಕೋಡ್ ವ್ಯವಸ್ಥೆ ಹಾಗೂ ಹೋಮ್ ಗಾರ್ಡ್ಗಳ ನಿಯೋಜನೆ:

ಕೆರೆಗಳ ಬಳಿಯಿರುವ ಕಲ್ಯಾಣಿಗಳ ಬಳಿ ಗಣೇಶ ವಿಸರ್ಜನೆ ಮಾಡುವ ವೇಳೆ ಇಲಾಖಾ ವಾರು ನಿಯೋಜನೆ ಮಾಡಿರುವ ಸಿಬ್ಬಂದಿಗೆ ಡ್ರೆಸ್ ಕೋಡ್ ನೀಡಬೇಕು. ಜೊತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಪೊಲೀಸ್ ಇಲಾಖೆಯಿಂದ ಹೋಮ್ ಗಾರ್ಡ್ಗಳನ್ನು ನಿಯೋಜನೆ ಮಾಡಲು ಸೂಚಿಸಲಾಯಿತು.

ಅವಶ್ಯಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಿ:

ಪಾಲಿಕೆ ವ್ಯಾಪ್ತಿಯಲ್ಲಿ ಮನೆಗಳಲ್ಲಿ ಪ್ರತಿಷ್ಠಾಪನೆ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಆಯಾ ವಲಯಗಳ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಿದರು.

ಪಿಓಪಿ ತಯಾರಿಕಾ ಘಟಕಗಳ ಪರಿಶೀಲನೆ ನಡೆಸಿ:*

ನಗರದಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಪಿಓಪಿ (ಬಣ್ಣದ ಗಣೇಶ)ಗಣೇಶ ಮೂರ್ತಿಗಳ ತಯಾರಿಕೆಯನ್ನು ನಿಷೇಧಿಸಲಾಗಿದ್ದು, ಗಣೇಶ ಮೂರ್ತಿ ತಯಾರಿಕಾ ಘಟಕಗಳಿಗೆ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದಲ್ಲಿ ಅವುಗಳನ್ನು ಸೀಜ್ ಮಾಡಿ ಅಂತಹವರ ಮೇಲೆ ದಂಡ ವಿಧಿಸುವುದರ ಜೊತೆಗೆ ಕಾನೂನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಯಿತು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಶ್ರೀ ದಯಾನಂದ್, ವಿಶೇಷ ಆಯುಕ್ತರಾದ ಶ್ರೀ ಸುರಾಳ್ಕರ್ ವಿಕಾಸ್ ಕಿಶೋರ್, ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಎಲ್ಲಾ ವಲಯ ಆಯುಕ್ತರು, ಉಪ ಆಯುಕ್ತರಾದ ಶ್ರೀ ಮಂಜುನಾಥ ಸ್ವಾಮಿ, ಪಾಲಿಕೆ, ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article