ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಆಂಧ್ರಪ್ರದೇಶದ ಯೋಧ ಪಾಕ್‌ ಶೆಲ್‌ ದಾಳಿಗೆ ಬಲಿ

Most read

ಹೈದರಾಬಾದ್‌: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ ಒ ಸಿ) ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಆಂಧ್ರಪ್ರದೇಶದ ಸೈನಿಕನೊಬ್ಬರು ಹುತಾತ್ಮರಾಗಿದ್ದಾರೆ. ಶ್ರೀಸತ್ಯಸಾಯಿ ಜಿಲ್ಲೆಯ ಮುರಳಿ ನಾಯಕ್ ಪಾಕಿಸ್ತಾನ ಸೇನೆಯ ಅನಿಯಂತ್ರಿತ ಶೆಲ್ ದಾಳಿಯಲ್ಲಿ ಅಸು ನೀಗಿದ್ದಾರೆ. ಇವರು ಗದ್ದಮತ್ತಂಡ ಪಂಚಾಯತ್ ವ್ಯಾಪ್ತಿಯ ಕಲ್ಲಿತ್ತಂಡ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಇವರ ಮೃತದೇಹ ಶನಿವಾರ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ. ಬುಧವಾರ ಅಥವಾ ಗುರುವಾರ ನಡೆದ ಯಾವ  ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎನ್ನುವುದು ಖಚಿತವಾಗಿಲ್ಲ.

ಹುತಾತ್ಮ ಯೋಧ ಮುರಳಿ ನಾಯಕ್ ಅವಿವಾಹಿತರಾಗಿದ್ದಾರೆ. ಮೃತರ ಸಾವಿಗೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ದೇಶ ರಕ್ಷಣೆಯಲ್ಲಿ ಶ್ರೀ ಸತ್ಯಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲಾ ಮಂಡಲದ ಮುರಳಿ ನಾಯಕ್ ಎಂಬ ಯೋಧ ಸಾವನ್ನಪ್ಪಿದ ಸುದ್ದಿ ಕೇಳಿ ದುಃಖವಾಗಿದೆ ಎಂದು ಹೇಳಿದ್ದಾರೆ.

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮುರಳಿ ನಾಯಕ್ ಅವರಿಗೆ ಶ್ರದ್ಧಾಂಜಲಿಗಳು. ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಆಪರೇಷನ್ ಸಿಂಧೂರ್‌ ನ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಯುದ್ಧಭೂಮಿಯಲ್ಲಿ ಹೋರಾಡುತ್ತಿದ್ದಾಗ ಮುರಳಿ ನಾಯಕ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ ತಮ್ಮ ಸಂತಾಪದಲ್ಲಿ ಶೋಕಿಸಿದ್ದಾರೆ.

ನಾಯಕ್ ಅವರ ಅಂತ್ಯಕ್ರಿಯೆಯನ್ನು ಪೂರ್ಣ ರಾಜ್ಯ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.

More articles

Latest article