ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಹೋರಾಟಗಾರರ ನಡುವೆ ಘರ್ಷಣೆ ನಡೆದು ಮಾತಿನ ಚಕಮಕಿ ನಡೆದಿದೆ. ನೂಕುನುಗ್ಗಾಟದಲ್ಲಿ ಪ್ರತಿಭಟನಾಕಾರನೊಬ್ಬ ಅಸ್ವಸ್ಥನಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾರಿಕೇಡ್ ತಳ್ಳಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಶಾಸಕ ಅರವಿಂದ ಬೆಲ್ಲದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಹಸ್ರಾರು ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಡುತ್ತಿದ್ದಾರೆ. ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸ್ ವಾಹನ ತಡೆದು, ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದಾರೆ. ಪೊಲೀಸ್ ವಾಹನಕ್ಕೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಸಚಿವರಾದ ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಸುಧಾಕರ್ ಅವರು ಭೇಟಿ ನೀಡಿದ್ದರೂ ಜಯಮೃತ್ಯುಂಜಯ ಸ್ವಾಮೀಜಿ ಕಿವಿಗೊಡಲಿಲ್ಲ. ಸ್ವತಃ ಮುಖ್ಯಮಂತ್ರಿಗಳೇ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು. ಅನಿವಾರ್ಯವಾಗಿ ಸಚಿವರು ಅಲ್ಲಿಂದ ಕಾಲ್ಕಿತ್ತರು. ಇದರಿಂದ ಶಾಂತಿಯುತ ಪ್ರತಿಭಟನೆ ವಿಕೋಪಕ್ಕೆ ತಿರುಗಿತು. ಸಧ್ಯಕ್ಕೆ ಅಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ.