ಬೆಂಗಳೂರು: ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಮಹಾರಾಷ್ಟ್ರದಲ್ಲಿ ಹೆಡೆಮುರಿ ಕಟ್ಟಿದ್ದಾರೆ. ಸಚಿವ ಪ್ರಿಯಾಂಕ್ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ದಾನಪ್ಪ ನರೋನೆ ಎಂದು ಗುರುತಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಕರೆ ತರುತ್ತಿದ್ದಾರೆ.
ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು, ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ನಂತರದ ಬೆಳವಣಿಗೆಯಲ್ಲಿ ದಾನಪ್ಪ ನರೋನೆ ಎಂಬ ವ್ಯಕ್ತಿ ಸಚಿವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ.
ಸಚಿವ ಪ್ರಿಯಾಂಕ್ ಖರ್ಗೆ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಳಿಸಿದ್ದರು. ನಂತರ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಆರಂಭಿಸಿದಾಗ ಆರೋಪಿಯು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಲಭ್ಯವಾಗಿತ್ತು.
ಬೆಂಗಳೂರು ಹಾಗೂ ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ದಾನಪ್ಪ ನರೋನೆಯನ್ನು ಬಂಧಿಸಿದ್ದಾರೆ. ಆರೋಪಿ ದಾನಪ್ಪ ನರೋನೆ ಸಚಿವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ. ಈ ಬೆದರಿಕೆ ಕರೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.
ದಾನಪ್ಪ ನರೋನೆಯ ಹಿನ್ನೆಲೆ, ಆತನ ಕರೆಯ ಹಿಂದಿನ ಉದ್ದೇಶ ಕುರಿತು ತನಿಖೆ ನಡೆಯುತ್ತಿದೆ. ಸಚಿವರಿಗೆ ಕರೆ ಮಾಡಲು ಈತನಿಗೆ ಯಾರಾದರೂ ಪ್ರಚೋದನೆ ನೀಡಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಅನುಮತಿ ಪಡೆದು ಬೆಂಗಳೂರಿಗೆ ಕರೆತರಲಾಗುತ್ತದೆ.