ನವದೆಹಲಿ: ಕಾನೂನು ಬಾಹಿತ ಚಟುವಟಿಕೆ ನಿಯಂತ್ರಣ ತಡೆ (ಯುಎಪಿಎ) ಅಡಿಯಲ್ಲಿ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ಸಮ್ಮತಿಸಿದೆ.
ಮುಖ್ಯನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ಪೀಠವು ಅರ್ಜಿಯನ್ನು ಪುರಸ್ಕರಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಪಿಎಫ್‌ಐ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿ ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರ 2022 ಸೆಪ್ಟೆಂಬರ್ 28ರಂದು ಪಿಎಫ್‌ಐ ಅನ್ನು ಯುಎಪಿಎ ಕಾಯ್ದೆಯ ಸೆಕ್ಷನ್ 3ರಡಿ ಕಾನೂನು ಬಾಹಿರ ಎಂದು ಘೋಷಿಸಿ 5 ವರ್ಷ ನಿಷೇಧ ಹೇರಿತ್ತು. ಈ ಸಂಘಟನೆಯು ದೇಶದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆಗೆ ಅಪಾಯಕಾರಿಯಾಗಿದೆ ಎಂದೂ ಪ್ರತಿಪಾದಿಸಿತ್ತು.
2023ರ ಮಾರ್ಚ್‌ನಲ್ಲಿ ದೆಹಲಿ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ನೇತೃತ್ವದ ಯುಎಪಿಎ ನ್ಯಾಯಾಧೀಕಣ ನಿಷೇಧವನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಪಿಎಫ್‌ಐ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.