ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದೆ. ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ ಅಥವಾ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೌಕರರ ಸಂಘ ಸರ್ಕಾರಕ್ಕೆ ಪತ್ರ ಬರೆದಿತ್ತು. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಸಂಘ ಅಭಿಪ್ರಾಯಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸುವಂತೆ ಸಂಘ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.