ರಾಯ್‌ಬರೇಲಿ: ಇಡೀ ದೇಶಾದ್ಯಂತ ನಾವು ಜನರ ಹಕ್ಕುಗಳನ್ನು ರಕ್ಷಿಸಲು ಹೋರಾಟ ನಡೆಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಂಪತ್ತನ್ನು ತಮಗೆ ಬೇಕಾದ ಕೆಲವೇ ವ್ಯಕ್ತಿಗಳಿಗೆ ವರ್ಗಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಉತ್ತರಪ್ರದೇಶದ ರಾಯ್‌ಬರೇಲಿಯಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಇಡೀ ಸಂಪತ್ತು ಉದ್ಯಮಿಗಳಾದ ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರ ಹಿಡಿತದಲ್ಲೇ ಇರಬೇಕು ಎಂದು ಪ್ರಧಾನಿ ಮೋದಿ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದೇಶಾದ್ಯಂತ ಗ್ರಾಮೀಣ ಜನತೆಗೆ ಉದ್ಯೋಗ ಒದಗಿಸುತ್ತಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯ ಸ್ವರೂಪವನ್ನೇ ಬದಲಾಯಿಸುವ ಮೂಲಕ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಗಾಳಿಗೆ ದೂಡುತ್ತಿದ್ದಾರೆ. ನರೇಗಾ ಯೋಜನೆ ಬದಲಾಯಿಸುವ ಮೂಲಕ ಮಹಾತ್ಮ ಗಾಂಧಿಯನ್ನು ಅವಮಾನಿಸಿದ್ದಾರೆ. ನರೇಗಾ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡುವ ಮೂಲಕ ಬಡವರಿಗೆ ಅನ್ಯಾಯ ಎಸಗಲಾಗುತ್ತಿದೆ. ಕೆಲವೇ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದರು.

