ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿನ್ನೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಈ ವಿಷಯವನ್ನು ತಿಳಿಸಿದ್ದು, ಪ್ರಕರಣದ ತನಿಖೆಯನ್ನು ತತ್ ಕ್ಷಣವೇ ವಹಿಸಿಕೊಳ್ಳಲು ಸಿಐಡಿಗೆ ಸೂಚಿಸಿದ್ದಾರೆ.
ಈ ನಡುವೆ ಸದಾಶಿವ ನಗರ ಪೊಲೀಸರು ಇಂದು ಬೆಳಿಗ್ಗೆ ಪ್ರಾಥಮಿಕ ತನಿಖೆ ಆರಂಭಿಸಿದ್ದು, ಘಟನೆ ನಡೆಯಿತು ಎನ್ನಲಾದ ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಪೋಕ್ಸೋ ಪ್ರಕರಣಗಳ ತನಿಖೆ ಕುರಿತಾಗಿ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನಗಳು ಇದ್ದು ಅದರ ಪ್ರಕಾರವೇ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್ ಇದೊಂದು ಸೂಕ್ಷ್ಮ ವಿಚಾರ, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆ ರಾತ್ರಿ ಹತ್ತು ಗಂಟೆಯ ಸುಮಾರಿಗೆ 17 ವರ್ಷದ ಬಾಲಕಿ ಮತ್ತು ಆಕೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ಬಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಸದ್ಯಕ್ಕೆ ಇಷ್ಟೇ ಮಾಹಿತಿ ನಮ್ಮ ಬಳಿ ಇದೆ ಎಂದು ತಿಳಿಸಿದ್ದಾರೆ.
ಇದೊಂದು ಬಹಳ ಸೂಕ್ಷ್ಮ ವಿಷಯವಾಗಿದೆ. ಯಾಕೆಂದರೆ ಇದರಲ್ಲಿ ನಮ್ಮ ರಾಜ್ಯದ ಮಾಜಿ ಮುಖ್ಯಮಂತ್ರಿಯ ಹೆಸರಿದೆ ಎಂದು ಅವರು ಹೇಳಿದರು.
ಪ್ರಕರಣದಲ್ಲಿ ರಾಜಕೀಯ ಕೈವಾಡ ಇರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದಕ್ಕೆ ರಾಜಕೀಯ ಕೋನವನ್ನು ನೀಡಬೇಡಿ, ಆ ಮಹಿಳೆ ನಮಗೆ ಗೊತ್ತಿಲ್ಲ, ಆಕೆಯ ಕುರಿತೂ ನಮಗೆ ಏನೇನೂ ಗೊತ್ತಿಲ್ಲ. ಆಕೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಲಾಗಿದೆ ಎಂಬುದಷ್ಟೇ ನಮಗೆ ಗೊತ್ತು ಎಂದು ಹೇಳಿದರು.