ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಸಿಕ್ಕಿಕೊಳ್ಳುವುದಕ್ಕೂ ಮುನ್ನ ತಮ್ಮ ವರ್ತನೆ ಕುರಿತು ಅರಿವಿರಬೇಕಿತ್ತಲ್ಲವೇ ಎಂದು ಹೈಕೋರ್ಟ್, ಪ್ರಕರಣದ ಆರೋಪಿಯಾಗಿರುವ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಶ್ನಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ನಿರೀಕ್ಷಣಾ ಜಾಮೀನಿನ ಷರತ್ತುಗಳ ಸಡಿಲಿಕೆ ಮತ್ತು ಕೆಲವು ಕಾನೂನು ಅಂಶಗಳ ಸ್ಪಷ್ಟನೆ ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು, ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರು ವಿಚಾರಣೆ ನಡೆಸಿದರು.
ಹಿರಿಯ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರು ಪದೇ ಪದೇ ರಾಜ್ಯ ಮತ್ತು ದೇಶಾದ್ಯಂತ ಪ್ರವಾಸ ಕೈಗೊಳ್ಳುವ ಅನಿವಾರ್ಯತೆ ಇರುತ್ತದೆ. ಆದ್ದರಿಂದ ಪ್ರತಿ ಬಾರಿಯೂ ಅನುಮತಿ ಕೋರಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಅವರಿಗೆ ಕಷ್ಟವಾಗುತ್ತದೆ ಎಂದು ಯಡಿಯೂರಪ್ಪ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್ ನ್ಯಾಯಾಲಯದ ಗಮನಕ್ಕೆ ತಂದರು.
ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇಂತಹ ಅಹಿತಕರ ಘಟನೆಗಳಲ್ಲಿ ಭಾಗಿಯಾಗುವುದಕ್ಕೂ ಮುನ್ನ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಅರಿವಿರಬೇಕಿತ್ತು. ಅವರು ಇತರರಿಗೆ ಮಾದರಿಯಾಗಿರಬೇಕಲ್ಲವೇ ಎಂದು ಪ್ರಶ್ನಿಸಿತು. ಹಿರಿಯ ರಾಜಕೀಯ ನಾಯಕರು ಇಂತಹ ಸಂದರ್ಭಗಳನ್ನು ಮೀರಿ ನಡೆದುಕೊಳ್ಳಬೇಕು ಎಂದು ಮೌಖಿಕವಾಗಿ ಹೇಳಿತು.
ಆಗ ನ್ಯಾಯಮೂರ್ತಿಗಳು ಅರ್ಜಿದಾರರಿಗೆ ಪ್ರವಾಸಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಪ್ರವಾಸ ನಿರ್ಬಂಧದಲ್ಲಿ ಸಡಿಲಿಕೆ ಮಾಡಬಹುದೇ ಎಂಬುದನ್ನು ಪರಿಶೀಲಿಸಿ ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್ ಅವರಿಗೆ ಸೂಚಿಸಿದರು. ಯಡಿಯೂರಪ್ಪ ಅವರಿಗೆ ವಿಧಿಸಲಾಗಿರುವ ಪ್ರವಾಸ ನಿರ್ಬಂಧ ಮುಂದುವರಿಯಲಿದೆ ಎಂದು ವಿಚಾರಣೆ ಯನ್ನು ಮುಂದೂಡಿತು.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012 (ಪೋಕ್ಸೊ) ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಂಜ್ಞೆಯ ಅಪರಾಧ ಎಂದು ಪರಿಗಣಿಸಿರುವುದನ್ನು ರದ್ದುಪಡಿಸಬೇಕು. ಸಂಜ್ಞೆಯ ಅಪರಾಧದ ಬಗ್ಗೆ ಹೊಸದಾಗಿ
ಪರಿಗಣಿಸುವಂತೆ ಹೊರಡಿಸಲಾಗಿದ್ದ ಆದೇಶದಲ್ಲಿ ಕೆಲವೊಂದು ಕಾನೂನು ಅಂಶಗಳನ್ನು ಸ್ಪಷ್ಟಪಡಿಸಬೇಕು ಎಂದು ಯಡಿಯೂರಪ್ಪ ಅವರು ಕೋರಿದ್ದಾರೆ.
ಪ್ರಕರಣದ ಹಿನ್ನೆಲೆ:
ತಮ್ಮ 17 ವರ್ಷದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ನ್ಯಾಯಕ್ಕಾಗಿ ಸಹಾಯ ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಬಳಿ ಹೋಗಿದ್ದಾಗಿ ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಅವರು ನನ್ನ ಪುತ್ರಿಯನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ನನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.
ನಂತರ ಸದಾಶಿವ ನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದ್ದರು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.