ಬೆಂಗಳೂರು: ಶನಿವಾರ ನಡೆಯಲಿರುವ ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಒಂದು ವೇಳೆ ಬಲವಂತವಾಗಿ ಬಂದ್ ಮಾಡಿಸಲು ಮುಂದಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ದಯಾನಂದ್ ಅವರು ಎಚ್ಚರಿಕೆ ನೀಡಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಗಾವಹಿಸಲಾಗುವುದು. ಬಂದ್‌ಗೆ ಕರೆ ನೀಡಿರುವ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳ ಸಭೆ ನಡೆಸಿ, ನ್ಯಾಯಾಲಯದ ಆದೇಶದ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಗಳಾದರೆ ಸಂಘಟನೆಗಳೇ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ನಗರದ ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಭದ್ರತೆ ಸಂಬಂಧ ಸಲಹೆ, ಸೂಚನೆ ನೀಡಲಾಗಿದೆ. ಬಂದ್ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಮಧ್ಯೆ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಹಾಗೂ ಕನ್ನಡಿಗರ ಹಿತಕ್ಕಾಗಿ ಶನಿವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ನಡೆಸಲಾಗುವುದು. ರಾಜ್ಯದಲ್ಲಿ ಎಂಇಎಸ್ ನಿಷೇಧ, ಹಿಂದಿ ಹೇರಿಕೆ, ಕೆಎಸ್‌ಆರ್‌ಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ ರಕ್ಷಣೆ, ಉದ್ಯೋಗದಲ್ಲಿ ಕನ್ನಡಿಗರ ಕಡೆಗಣನೆ, ಪರಭಾಷಿಕರ ದಬ್ಬಾಳಿಕೆ, ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಂದ್ ನಡೆಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.