ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕೆ.ಅರುಣ್ ಎಚ್ಚರಿಕೆ ನೀಡಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಕೆಲವು ಕಿಡಿಗೇಡಿಗಳು ಭಾನುವಾರ ರಾತ್ರಿ ಪ್ರತಿಭಟನೆ ನಡೆಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆದಿರುವ ಕೆಲವು ಹತ್ಯೆಗಳಿಂದಾಗಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹತ್ತು ವರ್ಷಗಳೀದೀಚೆಗೆ ನಡೆದಿರುವ ಇಂತಹ ಹತ್ಯೆಗಳನ್ನು ವಿಶ್ಲೇಷಣೆಗೊಳಪಡಿಸಿದಾಗ, ಅವುಗಳ ಆರೋಪಿಗಳು ಕೋಮುವಾದಿ ಸಂಘಟನೆಗಳ ಸಂಪರ್ಕದಲ್ಲಿ ಇದ್ದದ್ದು ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಕೋಮುವಾದಿ ಸಂಘಟನೆಗಳು ಮುಖಂಡರ ಪಟ್ಟಿ ತಯಾರಿಸಿ, ಅವರ ದೈನಂದಿನ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಿದ್ದೆವು. ಈ ಕ್ರಮ ಕೈಗೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲವರು ಕಡಬ ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ ಎಂದು ಅವರು ಹೇಳಿದರು.
ಕಡಬ ಠಾಣೆಯ ಬಳಿ ಪ್ರತಿಭಟನೆ ನಡೆಸಿದವರು, ತಮ್ಮ ಕುಟುಂಬದ ಸದಸ್ಯರನ್ನೂ ಕರೆ ತರುವುದಾಗಿ ಹೇಳಿದ್ದಾರೆ. ಕುಟುಂಬದ ಸದಸ್ಯರನ್ನು ಕರೆ ತಂದು ಪ್ರತಿಭಟನೆ ನಡೆಸಿದರೆ, ಅವರ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಕೋಮುವಾದಿ ಸಂಘಟನೆಗಳ ಮುಖಂಡರ ಚಲನವಲನ ಗಮನಿಸುವ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಮುಂದೆಯೂ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಬರುವವರೆಗೂ ಇದು ಮುಂದುವರಿಯಲಿದೆ ಎಂದು ಅರುಣ್ ಅವರು ಸ್ಪಷ್ಟಪಡಿಸಿದ್ದಾರೆ.