ತಮಿಳುನಾಡು : ಮಹಿಳಾ ಜಿಲ್ಲಾಧಿಕಾರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಲ್ಲಕುರಿಚಿ ಕ್ಷೇತ್ರದ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್ ಅವರಿಗೆ ಪೊಲೀಸರು ಬುಧವಾರ ಸಮನ್ಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಸಮನ್ಸ್ ನೀಡಲು ಪೊಲೀಸ್ ಇನ್ಸ್ಪೆಕ್ಟರ್ ಶಾಸಕರ ಕಲ್ಲಕುರಿಚಿಯ ನಿವಾಸಕ್ಕೆ ಭೇಟಿ ನೀಡಿದ್ದರು.
ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ನವೆಂಬರ್ 23ರಂದು ದೂರು ಸಲ್ಲಿಸಿದ್ದರು. ಶಾಸಕ ಅರುಳ್ ವಿಘ್ನೇಶ್ ತಮಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಅವರು ಆರೋಪಿಸಿದ್ದರು. ಈ ದೂರಿನ ಆಧಾರದ ಮೇಲೆ ಕಲ್ಲಕುರಿಚಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಐದು ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 24ರಂದು ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಲಕ್ಷ್ಮೀನಾರಾಯಣನ್, ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಸೂಚಿಸಿದ್ದರು.
ವಿಚಾರಣೆ ವೇಳೆ ರಾಜ್ಯದ ಸರ್ಕಾರಿ ಅಭಿಯೋಜಕ ಆರ್. ಜಾನ್ ಸತ್ಯನ್ ಅವರು, ತಿರುಪ್ಪೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೃಷ್ಟಿ ಸಿಂಗ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪೊಲೀಸ್ ಮಹಾನಿರೀಕ್ಷಕಿ (ಆಡಳಿತ) ಎನ್. ಕಾಮಿನಿ ಅವರು ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದೂ ಮಾಹಿತಿ ನೀಡಿದರು.
ಇದರ ಜೊತೆಗೆ, ಸ್ವತಂತ್ರ ಸದಸ್ಯರನ್ನು ಒಳಗೊಂಡ ಆಂತರಿಕ ದೂರು ಸಮಿತಿ (ಐಸಿಸಿ) ರಚಿಸುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.
ಇತ್ತ, ಶಾಸಕ ಅರುಳ್ ವಿಘ್ನೇಶ್ ಈ ಹಿಂದೆ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದರು. ತಮ್ಮ ಮತ್ತು ಆಡಳಿತ ಪಕ್ಷದ ಹೆಸರಿಗೆ ಧಕ್ಕೆ ತರುವ ಉದ್ದೇಶದಿಂದ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಹೇಳಿದ್ದರು.

