ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ ವಂಚಿಸುತ್ತಿದ್ದ ಆರೋಪಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ಬಸವರಾಜು ಆರ್. ಮಗದಮ್ ಅವರು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ಕೆಲವು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ತಾನು ಲೋಕಾಯುಕ್ತ ಕಚೇರಿಯ ಅಧಿಕಾರಿ ಎಂದು ಪರಿಚಯಿಸಿಕೊಳ್ಳುತ್ತಿದ್ದ. ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗುತ್ತಿದೆ. ಪ್ರಕರಣ ದಾಖಲಾಗುವುದನ್ನು ತಪ್ಪಿಸಲು ಹಣ ನೀಡಬೇಕು ಎಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯ ಮೊಬೈಲ್ ಸಂಖ್ಯೆಯನ್ನು ಟ್ರೂ ಕಾಲರ್‌ನಲ್ಲಿ ಪರಿಶೀಲನೆ ನಡೆಸಲಾಗಿದ್ದು, ಲೋಕಾಯುಕ್ತ ಡಿವೈಎಸ್‌ಪಿ ಎಂದೇ ನಮೂದಾಗಿದೆ. ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮಹಾರಾಷ್ಟ್ರದ ಶೀರೋಲ್ ಪ್ರದೇಶವನ್ನು ತೋರಿಸುತ್ತಿದೆ. ಈತ ಲೋಕಾಯುಕ್ತ ಅಧಿಕಾರಿ
ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದು ಬಂದಿದೆ.