ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಮೈಸೂರಿನಲ್ಲಿಯೇ ವಾಸವಾಗಿದ್ದರು. ಇದೇ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕ, ಮುಖ್ಯಸ್ಥ ಹಾಗೂ ವಿಶ್ವವಿದ್ಯಾಲಯದ ಕಲಾನಿಕಾಯದ ಡೀನ್ ಆಗಿ ಸೇವೆ ಸಲ್ಲಿಸಿದಾರೆ.
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಇವರು ಮಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ ಹಾಗೂ ಪಿಎಚ್ಡಿ, ಷಿಕಾಗೊ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟೊರಲ್ ಪದವಿ ಪಡೆದಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಸೇರಿದಂತೆ 11 ಕೃತಿಗಳನ್ನು ರಚಿಸಿರುವ ಇವರು 2021ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.
ಕಳೆದ ವಾರವಷ್ಟೇ ಮೈಸೂರಿನ ರಂಗಾಯಣದಲ್ಲಿ ನಡೆದ ‘ಅವಸಾನದತ್ತ ನೀಲಗಿರಿ ಕನ್ನಡಿಗರು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ತಮ್ಮ ನೇತೃತ್ವದ ಹೈಕೋರ್ಟ್ ಸಮಿತಿ ವರದಿಯನ್ನು ಪ್ರಸ್ತಾಪಿಸಿದ್ದರು. ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ:
ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಕ ವ್ಯಕ್ತಪಡಿಸಿದ್ದಾರೆ. ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ ಎಂದು ತಮ್ಮ ಸಂದೇಶದಲ್ಲಿ ಸಂತಾಪ ಸೂಚಿಸಿದ್ದಾರೆ.
ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಶೋಕಿಸಿದ್ದಾರೆ.
ಚಿಂತಕ ಹಾಗೂ ರಾಜಕೀಯ ತಜ್ಞ ಪ್ರೊ.ಮುಜಾಫರ್ ಅಸ್ಸಾದಿ ನಿಧನಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಅಸ್ಸಾದಿ ಅವರು ಮೈಸೂರು ವಿಶ್ವ ವಿದ್ಯಾಲಯದ ಹಂಗಾಮಿ ಕುಲಪತಿ ಸೇರಿ ಹಲವು ಹುದ್ದೆ ಗಳ ಜವಾಬ್ದಾರಿ ವಹಿಸಿಕೊಂಡು ದಕ್ಷತೆ ಯಿಂದ ಕೆಲಸ ಮಾಡಿದ್ದರು. ಜನಪರ ಹಾಗೂ ಪ್ರಗತಿಪರ ಚಿಂತನೆ ಮೂಲಕ ಜನ ಸಮುದಾಯಗಳ ಒಳಿತು ಬಯಸುತ್ತಿದ್ದರು. ಇವರ ನಿಧನ ದಿಂದ ನಿಧನದಿಂದ ರಾಜ್ಯ ಒಬ್ಬ ಸಮಾಜಮುಖಿ ಚಿಂತಕನನ್ನು ಕಳೆದುಕೊಂಡಂತಾಗಿದೆ ಎಂದು ಜಮೀರ್ ಅಹಮದ್ ಖಾನ್ ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.