ನವದೆಹಲಿ: ದೆಹಲಿಯಲ್ಲಿಆಮ್ ಆದ್ಮಿ ಪಕ್ಷ ಅಧಿಕಾರ ಕಳೆದುಕೊಂಡು ಬಿಜೆಪಿ ಅಧಿಕಾರ ವಹಿಸಿಕೊಂಡ ಮೂರೇ ದಿನಗಳಲ್ಲಿ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಆತಿಶಿ ಗಂಭೀರ ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಎಎಪಿ ಅಧಿಕಾರ ಕಳೆದುಕೊಂಡ ಮೂರೇ ದಿನದಲ್ಲಿ ನಗರದ 40ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುತ್ತಿದೆ. ಜನರ ಈಗ ಇನ್‌ವರ್ಟರ್ ಖರೀದಿಸಲು ಮುಂದಾಗಿದ್ದಾರೆ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ವಿದ್ಯುತ್ ವಲಯವನ್ನು ನಿರಂತರವಾಗಿ ಗಮನಿಸುತ್ತಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೂರೇ ದಿನದಲ್ಲಿ ಅದು ಕುಸಿದಿದೆ. ಬಿಜೆಪಿಗೆ ಹೇಗೆ ಅಧಿಕಾರ ನಡೆಸಬೇಕು ಎನ್ನುವುದು ಗೊತ್ತಿಲ್ಲ. ಉತ್ತರ ಪ್ರದೇಶದಲ್ಲಿ ಇರುವಂತೆ ದೆಹಲಿಯಲ್ಲಿಯೂ ವಿದ್ಯುತ್ ಸಮಸ್ಯೆ ತಲೆದೂರುವಂತೆ ಮಾಡಲಿದೆ. ಈ ಮೂಲಕ ಬಿಜೆಪಿ ರಾಷ್ಟ್ರ ರಾಜಧಾನಿ ದೆಹಲಿಯನ್ನು ಉತ್ತರ ಪ್ರದೇಶವನ್ನಾಗಿಸಲಿದೆ ಎಂದು ವಾಗ್ದಾಳಿ ನಡೆಸಿದರು.
ಈ ಆರೋಪಕ್ಕೆ ಬಿಜೆಪಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ 26 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಇದುವರೆಗೂ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸದಿಂದ ಮರಳಿದ ನಂತರ ಸರ್ಕಾರ ರಚನೆ ಪ್ರಕ್ರಿಯೆ ನಡೆಯಲಿದೆ.