ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ CCB ತನಿಖೆ ನಡೆಸುತ್ತಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ಬಳಿ ಮಾತನಾಡಿದ ಅವರು, ಜೈಲಿನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣದ ತನಿಖೆಯನ್ನು CCB ನಡೆಸುತ್ತಿದೆ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿಯನ್ನು ತನಿಖಾ ತಂಡದಿಂದಲೇ ಪಡೆಯಬೇಕು ಎಂದು ಸ್ಪಷ್ಟಪಡಿಸಿದರು.
ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, “ತನಿಖೆ ನಡೆಯುತ್ತಿದೆ. ತನಿಖೆ ಬಗ್ಗೆ CCBಯವರನ್ನು ಕೇಳಬೇಕು. ನಾವು ತನಿಖೆ ಮಾಡುತ್ತಿಲ್ಲ” ಎಂದರು.
ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳ ಕರ್ತವ್ಯ ಲೋಪದ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ, ವಿಚಾರಣೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಅಧಿಕಾರಿಗಳ ವಿರುದ್ಧ ತಲೆದಂಡವಾಗಲಿದೆಯೇ ಎಂಬುದು ತಮಗೆ ತಿಳಿದಿಲ್ಲ ಎಂದೂ ಅಲೋಕ್ ಕುಮಾರ್ ಹೇಳಿದರು.
ಇದೇ ವೇಳೆ ತಾವು ಬಹಳ ದಿನಗಳಿಂದ ಕಾರಾಗೃಹಕ್ಕೆ ಭೇಟಿ ನೀಡಿರಲಿಲ್ಲ. ಇದೀಗ ಜನರಲ್ ವಿಸಿಟ್‌ಗಾಗಿ ಜೈಲಿಗೆ ಬಂದಿರುವುದಾಗಿ ಅವರು ಹೇಳಿದರು. ವಿವಿಧ ಬ್ಯಾರಕ್‌ಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಹಾಗೂ ಸಮಸ್ಯೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿರುವುದು ಹಾಗೂ ಜೈಲಿನೊಳಗೆ ಮೊಬೈಲ್ ಬಳಕೆಯ ವಿಡಿಯೋ ವೈರಲ್ ಆಗಿರುವುದು ಕಾರಾಗೃಹದ ಭದ್ರತಾ ವ್ಯವಸ್ಥೆ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣದ ಕುರಿತು CCB ತನಿಖೆಯ ಬಳಿಕವೇ ಮೊಬೈಲ್ ಜೈಲಿನೊಳಗೆ ಹೇಗೆ ಪ್ರವೇಶಿಸಿತು ಮತ್ತು ಬಳಕೆಯಾಗಿದ್ದು ಹೇಗೆ ಎಂಬುದು ಸ್ಪಷ್ಟವಾಗಬೇಕಿದೆ.

