ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಗೆ ಕೂಡಲೇ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪತ್ರ ಬರೆದಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಕೇಂದ್ರ ಸಚಿವರಿಗೆ ಬರೆದ ಪತ್ರವನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರದ ಅನ್ಯಾಯಗಳ ಸರಣಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 15ನೇ ಹಣಕಾಸು ಆಯೋಗದ ಅನುದಾನದ ಬಾಕಿಯೂ ಪ್ರಮುಖವಾದುದು. ಗ್ರಾಮಗಳ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿರುವ ಈ ಅನ್ಯಾಯದ ಬಗ್ಗೆ ಸಾಕಷ್ಟು ಬಾರಿ ಗಮನ ಸೆಳೆದರೂ ಕರ್ನಾಟಕದೆಡೆಗಿನ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮುಂದುವರೆದಿದೆ.
2026ರ ಫೆಬ್ರವರಿಯಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುತ್ತಿದ್ದರೂ ₹2,186 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದಿರುವುದು ಗ್ರಾಮೀಣ ಕರ್ನಾಟಕಕ್ಕೆ ಎಸಗುತ್ತಿರುವ ಮಹಾದ್ರೋಹವೇ ಸರಿ. ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳು, ವಿಕಲಚೇತನರ ಕಲ್ಯಾಣ, ರಸ್ತೆ ಮುಂತಾದ ಕಾರ್ಯಕ್ರಮಗಳಿಗೆ ಬಳಕೆಯಾಗುವ ಈ ಅನುದಾನವನ್ನು ಬೇರೆಲ್ಲ ರಾಜ್ಯಗಳಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾತ್ರ ಮಲತಾಯಿ ಧೋರಣೆ ತೋರುತ್ತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ನಾಯಕರಿಗೆ ಕರ್ನಾಟಕದ ಬಗ್ಗೆ, ಕನ್ನಡಿಗರ ಬಗ್ಗೆ ಕಾಳಜಿ ಇದ್ದರೆ ಈ ಅನ್ಯಾಯದ ಕುರಿತು ನಮ್ಮೊಂದಿಗೆ ದನಿಗೂಡಿಸಲಿ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

