ಮಂಡ್ಯ: ಕಾವೇರಿ ನೀರನ್ನು ಕದ್ದುಮುಚ್ಚಿ ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕರವೇ ಅಧ್ಯಕ್ಷರಾದ ಡಿ.ಎಸ್. ವೇಣು ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಎಸ್. ವೇಣು, ಈಗಾಗಲೇ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವ ಮೂಲಕ ಜಲಾಶಯವನ್ನು ಖಾಲಿ ಮಾಡಲಾಗುತ್ತಿದೆ. ಇದೀಗ ಕೃಷ್ಣರಾಜ ಸಾಗರ ಜಲಾಶಯದಿಂದಲೂ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ರಾಜ್ಯದ ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕಾವೇರಿ ನೀರಿನ ಮೇಲೆ ಕರ್ನಾಟಕದ ರೈತರು ಮತ್ತು ಜನರ ಹಕ್ಕನ್ನು ರಕ್ಷಿಸಬೇಕು. ಜಲಾಶಯಗಳ ನೀರಿನ ಮಟ್ಟ, ರೈತರ ಬೆಳೆಗಳು ಹಾಗೂ ಕುಡಿಯುವ ನೀರಿನ ಅಗತ್ಯವನ್ನು ಪರಿಗಣಿಸಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

