ಬೆಂಗಳೂರು: ಚಲನಚಿತ್ರ ಪ್ರದರ್ಶನದ ಸಮಯವನ್ನು ಪಾಲಿಸದೆ ಅನಧಿಕೃತವಾಗಿ ಪುಷ್ಪ- 2 ಚಲನಚಿತ್ರ ಪ್ರದರ್ಶಿಸುವಂತಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಈ ಆದೇಶ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಎರಡೂ ಜಿಲ್ಲೆಗಳಿಗೆ ಅನ್ವಯವಾಗುತ್ತದೆ. ಇದರಿಂದ ಮಿಡ್ ನೈಟ್ ಶೋಗಳಿಗೆ ಟಿಕೆಟ್ ಕಾಯ್ದಿರಿಸಿದ್ದವರಿಗೆ ಭಾರಿ ನಿರಾಶೆಯಾಗಿದೆ. ಒಂದು ವೇಳೆ ಅನಧಿಕೃತವಾಗಿ ಚಲನಚಿತ್ರವನ್ನು ಪ್ರದರ್ಶಿಸಿದರೆ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಬೆಂಗಳೂರು ಪೊಲೀಸ್ ಆಯುಕ್ತರು ಹಾಗೂ ಗ್ರಾಮಾಂತರ ಎಸ್ ಪಿ ಗೆ ಸೂಚನೆ ನೀಡಿದ್ದಾರೆ.
ಮಿಡ್ ನೈಟ್ ಶೋಗಳ ಟಿಕೆಟ್ ಮಾರುವ ಬುಕ್ ಮೈ ಶೋ ವಿರುದ್ಧವೂ ಕ್ರಮಕ್ಕೆ ಡಿಸಿ ಸೂಚನೆ ನೀಡಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ನೀಡಿದ್ದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಉಮೇಶ್ ಬಣಕಾರ್ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು.
ಪತ್ರದಲ್ಲಿ ಅವರು ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಘಂಟೆಯ ಒಳಗೆ ಯಾವುದೇ ಚಿತ್ರಮಂದಿರಗಳಲ್ಲಿ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ ಎಂಬ ರಾಜ್ಯ ಸರ್ಕಾರದ ಆದೇಶವಿದೆ. ಆದರೂ ರಾಜ್ಯದ ಕೆಲವು ಚಿತ್ರಮಂದಿರಗಳಲ್ಲಿ ಅವಧಿಗೂ ಮುನ್ನ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ ಎಂದು ಹೇಳಿದ್ದರು.
ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗೆಯೇ ಚಿತ್ರಮಂದಿರಗಳಲ್ಲಿ ಟಿಕೇಟ್ ದರವು ಮನಸೋ ಇಚ್ಛೆ (ರೂ.500/-, ರೂ.1000/-, ರೂ.1500/-) ನಿಗದಿಪಡಿಸಲಾಗಿದೆ. ಈ ರೀತಿ ಸಾರ್ವಜನಿಕರಿಂದ ಸುಲಿಗೆ ಮಾಡುತ್ತಿರುವ ಚಿತ್ರಮಂದಿರಗಳ ವಿರುದ್ಧ ತಕ್ಷಣ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.