ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಮತ್ತು ಭಕ್ತರಿಗೆ ತೊಂದರೆ ಉಂಟಾಗಿರುವುದಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ಪ್ರತಿಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಐಪಿ ಸಂಪ್ರದಾಯಕ್ಕೆ ಸಂಪೂರ್ಣ ಲಗಾಮು ಹಾಕಿ ಭಕ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು ಎಂದು ಆಗ್ರಹಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ರಾಹುಲ್ ಗಾಂಧಿ, ಅವರು ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿರುವ ಅನುಮಾನಗಳಿವೆ. ಅನೇಕ ಭಕ್ತರು ಗಾಯಗೊಂಡಿರುವ ಸುದ್ದಿ ನೋವನ್ನುಂಟು ಮಾಡಿದೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಅಸಮರ್ಪಕ ವ್ಯವಸ್ಥೆ ಮತ್ತು ಸಾಮಾನ್ಯ ಭಕ್ತರ ಬದಲಿಗೆ ವಿಐಪಿಗಳ ಚಲನವಲನಕ್ಕೆ ವಿಶೇಷ ಆದ್ಯತೆ ನೀಡಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಕುಂಭಮೇಳದಲ್ಲಿ ಮಹಾಸ್ನಾನ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಈಗಲೂ ಕಾಲ ಮಿಂಚಿಲ್ಲ. ಸರ್ಕಾರವು ಇಂತಹ ಅಹಿತಕರ ಘಟನೆಗಳನ್ನು ತಡೆಯಲು ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಿದೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಸಂತ್ರಸ್ತರಿಗೆ ನೆರವಾಗುವಂತೆಯೂ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಕಾಂಗ್ರೆಸ್ ಸಂಸದೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಹ ಅವರೂ ಸಹ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮಹಾಕುಂಭನಗರದಲ್ಲಿ ಎದುರಾಗಿರುವ ಅವ್ಯವಸ್ಥೆಗಳನ್ನು ಕುರಿತು ನಿರಂತರವಾಗಿ ದೂರು ಸಲ್ಲಿಸಿದ್ದರೂ ಯೋಗಿ ಆದಿತ್ಯನಾಥ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಎಂದು ಅವರು ದೂರಿದ್ದಾರೆ. ಗಾಯಾಳುಗಳನ್ನು ಏರ್ ಲಿಫ್ಟ್ ಮಾಡಿ ತಕ್ಷಣ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆಯೇ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಹಾಕುಂಭಮೇಳದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಅತ್ಯಂತ ದುಃಖಕರ. ಭಕ್ತರು ತಾಳ್ಮೆಯನ್ನು ಕಾಪಾಡಿಕೊಂಡು ಆಡಳಿತದ ಸೂಚನೆಯನ್ನು ಅನುಸರಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಘಟನೆಗೆ ಬಿಎಸ್ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂತಹ ಘಟನೆಗಳಿಂದ ಸರ್ಕಾರ ಎಚ್ಚೆತ್ತುಕೊಂಡು ಲಕ್ಷಾಂತರ ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.